ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕರ್ಫ್ಯೂ ಜಾರಿಗೊಳಿಸಿರುವುದು ಸೇರಿದಂತೆ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಕೊರೊನಾ ಹೆಚ್ಚಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಸಂವಾದ ನಡೆಸಿ ಕೊರೊನಾ ಕರ್ಫ್ಯೂ ಅಳವಡಿಸಿಕೊಳ್ಳುವ ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಳೆದ ರಾತ್ರಿಯಿಂದಲೇ ರಾಜ್ಯದ 8 ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದು, ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರಲಾಗಿದೆ. ಈ ಎಲ್ಲಾ ಮಾಹಿತಿಯನ್ನು ಸಿಎಂ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದ್ದಾರೆ.
ಕೋವಿಡ್ ಸ್ಥಿತಿಗತಿ..ನೈಟ್ ಕರ್ಫ್ಯೂ, ಕೊರೊನಾ ತಪಾಸಣೆ ಹೆಚ್ಚಳ, ಲಸಿಕೆ ನೀಡಿಕೆ ಹೆಚ್ಚಳ, ಕೊರೊನಾ ಮಾರ್ಗಸೂಚಿ ಕಠಿಣ ಪಾಲನೆ ಸೇರಿದಂತೆ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಮಾಹಿತಿ ಆಲಿಸಿದ ಪಿಎಂ ಮೋದಿ ಕೆಲವೊಂದು ಸಲಹೆಗಳನ್ನು ರಾಜ್ಯಕ್ಕೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಇಂದು ಮಾತನಾಡಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ತೆಗೆದುಕೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ರಾಜ್ಯದ ಕ್ರಮಗಳ ಬಗ್ಗೆ ಪ್ರಧಾನಿಗಳು ಮೆಚ್ಚುಗೆ ವ್ಯಕ್ತಪಡಿಸಿ, ಮೈಕ್ರೋ ಕಂಟೈನ್‌ಮೆಂಟ್ ಝೋನ್ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಸಲಹೆ ನೀಡಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.