ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಹಾಗೂ ರಾಜ್ಯ ಗೃಹ ಖಾತೆ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರಿಗೆ ಹೈಕಮಾಂಡ್ ಅಂತಿಮವಾಗಿ ಮಣೆ ಹಾಕಿದೆ. ನಿನ್ನೆ ಸಂಜೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬೊಮ್ಮಾಯಿ ಹೆಸರು ಮುಖ್ಯಮಂತ್ರಿ ಸ್ಥಾನಕ್ಕೆ ಅಂತಿಮ ಮಾಡಲಾಗಿದ್ದು, ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಕುತೂಹಲಕ್ಕೆ ತೆರೆ ಬಿದ್ದಿದೆ.
ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ನೂತನ ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಿದ್ದಾರೆ. ಸರ್ಕಾರ ರಚನೆಗೆ ರಾಜ್ಯಪಾಲರು ಅನುಮತಿಸಿದ್ದು, ರಾಜಭವನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಿಎಂ ಬೊಮ್ಮಾಯಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಬುಧವಾರ ಪ್ರಮಾಣವಚನ ಸಮಾರಂಭದ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ರಾಜಭವನದ ಸುತ್ತ ಬಿಗಿ ಭದ್ರತೆಯನ್ನೂ ಕಲ್ಪಿಸಲಾಗಿದೆ.