ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡುವೆಟ್ನಾಯ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಶಾಸಕ ಹರೀಶ್ ಪೂಂಜ ಸಂತಾಪ ಸೂಚಿಸಿದ್ದಾರೆ.
ಹಿರಿಯ ಸಮಾಜ ಸೇವಕ, ಕೊಡುಗೈ ದಾನಿ ಹಾಗೂ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶ್ರೀ ವಿಜಯರಾಘವ ಪಡ್ವೆಟ್ನಾಯರ ನಿಧನದ ಸುದ್ದಿ ಕೇಳಿ ವಿಷಾದವಾಯಿತು.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ನಿಮಗೂ ಕುಟುಂಬವರ್ಗದವರಿಗೂ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ.
ಅವರು ನಮ್ಮ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪ್ರೋತ್ಸಾಹಿಸುತ್ತಿದ್ದರು.
ಉಜಿರೆಯಲ್ಲಿ ನಮ್ಮ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸ್ಥಾಪಕ ಸದಸ್ಯರಾಗಿ ಅವರು ಸಕ್ರಿಯ ಸಹಕಾರ ನೀಡಿರುವುದನ್ನು ನಾವು ಕೃತಜ್ಞತೆಯಿಂದ ಸ್ಮರಿಸುತ್ತೇವೆ ಎಂದು ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಾಪ
ಇವರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಾಪ ಸೂಚಿಸಿದ್ದು
ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ,ಧಾರ್ಮಿಕ ಸಾಮಾಜಿಕ ಮುಂದಾಳುವಾಗಿ ಸಮಾಜಕ್ಕೆ ಪ್ರೇರಕ ಶಕ್ತಿಯಾಗಿ ಮಾರ್ಗದರ್ಶನ ಮಾಡುತಿದ್ದ ನನ್ನ ಮಾರ್ಗದರ್ಶಕರು ಪೂಜ್ಯ ಶ್ರೀ ವಿಜಯರಾಘವ ಪಡ್ವೆಟ್ನಾಯರು ಇಂದು ಇಹ ಲೋಕದ ಯಾತ್ರೆಯನ್ನು ಮುಗಿಸಿ ಶ್ರೀ ಜನಾರ್ಧನ ಸ್ವಾಮಿಯ ಪಾದಕಮಲದಲ್ಲಿ ಲೀನರಾಗಿದ್ದು ಪೂಜ್ಯರ ಆತ್ಮಕ್ಕೆ ವಿಷ್ಣು ಸಾಯುಜ್ಯ ಪ್ರಾಪ್ತಿಯಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.