ದೆಹಲಿ: ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇಂದು ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಿದೆ. ದಿಲ್ಲಿಯಲ್ಲಿಂದು ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಂತಿಮ ಪಟ್ಟಿ ಸಿದ್ಧವಾಗಲಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಸೇರಿದಂತೆ ಸಮಿತಿಯ ಸದಸ್ಯರು ಭಾಗವಹಿಸಲಿದ್ದಾರೆ.
ಇದಕ್ಕೂ ಮುನ್ನ ಶನಿವಾರದಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ಅಮಿತ್ ಶಾ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿಯ ಬಗ್ಗೆ ಚರ್ಚಿಸಿದರು. ಈ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಮನ್ಸುಖ್ ಮಾಂಡವೀಯಾ ಮತ್ತಿತರ ನಾಯಕರು ಉಪಸ್ಥಿತರಿದ್ದರು.ರಾಜ್ಯ ಬಿಜೆಪಿಯ ಕೋರ್ ಕಮಿಟಿ ಪ್ರತಿ ವಿಧಾನಸಭಾ ಸ್ಥಾನಕ್ಕೆ ಮೂವರು ಸ್ಪರ್ಧಾಕಾಂಕ್ಷಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ. ಅದನ್ನು ಕೇಂದ್ರ ಚುನಾವಣಾ ಸಮಿತಿಯ ಮುಂದೆ ಇಡಲಾಗುವುದು. ಕೇಂದ್ರ ಚುನಾವಣಾ ಸಮಿತಿಯಲ್ಲಿ ಅಭ್ಯರ್ಥಿಯ ಅಂತಿಮ ಘೋಷಣೆಯಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಏಪ್ರಿಲ್ 4 ರಂದು ಕರ್ನಾಟಕದಲ್ಲಿ ಬಿಜೆಪಿಯ ಕೋರ್ ಕಮಿಟಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಸಹ-ಪ್ರಭಾರಿ ಮನ್ಸುಖ್ ಮಾಂಡವೀಯಾ, ಕೇಂದ್ರ ಚುನಾವಣಾ ಸಮಿತಿ ಸದಸ್ಯ ಅಣ್ಣಾಮಲೈ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಭೆ ನಡೆಸಿ ಅಭ್ಯರ್ಥಿಗಳ ಕಿರು ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ.
ಎಲೆಕ್ಷನ್ ಮಾಹಿತಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಕಾಂಗ್ರೆಸ್ 80 ಮತ್ತು ಜೆಡಿಎಸ್ 37 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಮಾರ್ಚ್ 29 ರಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಕರ್ನಾಟಕ ವಿಧಾನಸಭೆಯ 224 ಸ್ಥಾನಗಳಿಗೆ ಮೇ 10 ರಂದು ಮತದಾನ, ಮೇ 13ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದ್ದರು. ಪ್ರಸ್ತುತ ವಿಧಾನಸಭೆಯ ಅವಧಿ ಮೇ 24 ರಂದು ಕೊನೆಗೊಳ್ಳಲಿದೆ.