ಸುಬ್ರಹ್ಮಣ್ಯ: ಆದಿ ಸುಬ್ರಹ್ಮಣ್ಯ ದೇವಸ್ಥಾನ ಬಳಿಯ ನೂಚಿಲ ಗುಡ್ಡದ ಬುಡದಲ್ಲೇ ಮಣ್ಣು ಸಮತಟ್ಟು ಮಾಡಿ ನಿರ್ಮಿಸಲಾದ 8 ಮನೆಗಳ ಮೇಲೆ ಗುಡ್ಡ ಕುಸಿಯುವ ಭೀತಿ ಉಂಟಾಗಿದ್ದು, ಈ ಕುಟುಂಬಕ್ಕೆ ನೋಟಿಸ್ ಜಾರಿ ಮಾಡಿ ಕುಟುಂಬಸ್ಥರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ಗೀತಾ ಸತೀಶ್ ನೂಚಿಲ, ಪದ್ಮಯ್ಯ ನೂಚಿಲ, ದುಗ್ಗಣ್ಣ ನೂಚಿಲ, ದಿನೇಶ್ ನೂಚಿಲ, ಶೋಭಾ ಭಾಸ್ಕರ ನೂಚಿಲ, ದೇವಕಿ ಬಾಲಕೃಷ್ಣ, ಶೋಭಾ ಪ್ರಮೋದ್ ಕುಮಾರ್ ಹಾಗೂ ಬಿ.ಎನ್. ರಾಧಾಕೃಷ್ಣ ಎಂಬವರು ಗುಡ್ಡದ ಕೆಳಗೆ ಮನೆ ಕಟ್ಟಿ ವಾಸವಾಗಿದ್ದರು. ಆದರೆ ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆ ಹಿನ್ನೆಲೆ ಗುಡ್ಡ ಕುಸಿದು ಬೀಳುವ ಅಪಾಯ ಹೆಚ್ಚಾಗಿದೆ. ಹೀಗಾಗಿ ಜು. 7ರಂದು ಕಡಬ ತಹಶೀಲ್ದಾರ್ ಈ ಕುಟುಂಬಗಳಿಗೆ ನೋಟಿಸ್ ಜಾರಿ ಮಾಡಿ ಜು.08ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಯ ಪ್ರವಾಸಿ ಮಂದಿರದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ. ಮಳೆಗಾಲ ಮುಗಿಯುವವರೆಗೆ ಈ ಮನೆಗಳನ್ನು ಬಳಸದಂತೆಯೂ ತಹಶೀಲ್ದಾರ್ ಸೂಚನೆ ನೀಡಿದ್ದಾರೆ.