ಬೆಂಗಳೂರು: ವ್ಯಕ್ತಿಯೊಬ್ಬರಿಗೆ ವಂಚಿಸಿರುವ ಆರೋಪದ ಹಿನ್ನೆಲೆ ಸಾಮಾಜಿಕ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ನಾಲ್ವರನ್ನು ಸೆ.12ರಂದು ರಾತ್ರಿ ಬೆಂಗಳೂರು ಸಿಸಿಬಿ ಪೊಲೀಸರು ಉಡುಪಿ ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಶಕ್ಕೆ ಪಡೆದಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ವ್ಯಕ್ತಿಯೊಬ್ಬರಿಗೆ ವಂಚಿಸಿರುವ ಆರೋಪದಲ್ಲಿ ಚೈತ್ರಾ ಕುಂದಾಪುರ ಖಾಕಿ ವಶವಾಗಿದ್ದಾರೆ.
ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಬಿಲ್ಲವ ನಾಯಕರಾಗಿರುವ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ಚೈತ್ರಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಕೇಂದ್ರದ ಬಿಜೆಪಿ ನಾಯಕರು ಹಾಗೂ ಆರ್‌ಎಸ್‌ಎಸ್ ಪ್ರಮುಖರ ಹೆಸರಿನಲ್ಲಿ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಕರಣದಲ್ಲಿ ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ ನಾಯಕ್ ಹಾಗೂ ಪ್ರಸಾದ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ ನಾಯಕ್ ಅವರನ್ನು ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.