ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇದೆ. ಈ ಹಿನ್ನಲೆ ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ವಿಸ್ತರಿಸಲಾಗಿದೆ.
ಸೆ.23 ರಿಂದ 30ರವರೆಗೆ ಈ ಆದೇಶ ಜಾರಿಗೆಯಲ್ಲಿರಲಿದ್ದು, ಒಂದು ವಾರ ಸಾರ್ವಜನಿಕರು 12 ಗಂಟೆಗಳ ಕಾಲ ಸೇವೆ ಪಡೆಯಬಹುದಾಗಿದೆ. ಸೆಪ್ಟೆಂಬರ್ 23ರ ನಾಲ್ಕನೇ ಶನಿವಾರದಂದೂ ಕೂಡ 12 ಗಂಟೆ ಕಾರ್ಯನಿರ್ವಹಿಸಲಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಬಿ.ಆರ್.ಮಮತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.