ದೆಹಲಿ: ಐಪಿಎಲ್ ಕ್ರಿಕೆಟ್ ನ 17ನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಮಾ 22 ರಿಂದ ಕ್ರಿಕೆಟ್ ಪಂದ್ಯಗಳು ಆರಂಭವಾಗಲಿವೆ. ಐಪಿಎಲ್ 2024ರ ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆಯಲಿದೆ.
ಲೋಕಸಭೆ ಚುನಾವಣೆ ಹಿನ್ನೆಲೆ ಪಂದ್ಯಾವಳಿಯ ವೇಳಾಪಟ್ಟಿಯನ್ನು ಎರಡು ಹಂತಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಸದ್ಯ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಎರಡನೇ ಹಂತದ ವೇಳಾಪಟ್ಟಿಯನ್ನು ಚುನಾವಣೆ ದಿನಾಂಕ ಘೋಷಣೆ ಬಳಿಕವೇ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಮೊದಲ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ತನ್ನ ತವರು ನೆಲದೊಂದಿಗೆ CSK ಟೂರ್ನಿಯನ್ನು ಆರಂಭಿಸಲಿದೆ.
ಐಪಿಎಲ್ನ ಎರಡನೇ ದಿನ ಅಂದರೆ ಮಾ. 23ರಂದು ಎರಡು ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ , ಎರಡನೇ ಪಂದ್ಯದಲ್ಲಿ ಸಂಜೆ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಬಾದ್ ಹಣಾಹಣಿ ನಡೆಯಲಿದೆ.
ಮಾ. 24 ಭಾನುವಾರವೂ ಎರಡು ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಸೆಣಸಲಿದ್ದು, ಎರಡನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ತಂಡಗಳು ಪೈಪೋಟಿ ನಡೆಸಲಿವೆ.
ಮಾ.31 ಭಾನುವಾರದಂದು ಮೊದಲ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ನಡೆದರೆ ಎರಡನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ಮಧ್ಯೆ ಹಣಾಹಣಿ ನಡೆಯಲಿದೆ.