ಬೆಂಗಳೂರು: ರಾಜ್ಯದಲ್ಲಿ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಅಪರಾಧ ಎಂಬ ಕಾನೂನು ಜಾರಿಯಲ್ಲಿದ್ದರೂ ರಾಜ್ಯದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ 2011ರ ವರ್ಷಕ್ಕಿಂತಲೂ ಕಡಿಮೆಯಾಗಿದ್ದು ಆಘಾತಕಾರಿಯಾಗಿದೆ.
2011ರ ಜನಗಣತಿ ಪ್ರಕಾರ 1000 ಗಂಡು ಮಕ್ಕಳಿಗೆ 939 ಹೆಣ್ಣು ಮಕ್ಕಳಿತ್ತು. ಆದರೆ, ಇತ್ತೀಚೆಗೆ ಜನಿಸುತ್ತಿರುವ ಸಂಖ್ಯೆ ತೆಗೆದುಕೊಂಡರೇ ಸಾವಿರ ಗಂಡು ಮಕ್ಕಳಿಗೆ ಕೇವಲ 865 ಹೆಣ್ಣು ಮಕ್ಕಳಿದ್ದಾರೆ ಎಂಬ ವರದಿ ಅಧಿಕಾರಿಗಳಿಂದ ಲಭ್ಯವಾಗಿದೆ.
ಮಂಡ್ಯದಲ್ಲಿ ನಡೆದ ದಿಶಾ ಸಭೆಯಲ್ಲಿ ಅಧಿಕಾರಿಗಳಿಂದ ಈ ಮಾಹಿತಿ ಸಿಕ್ಕಿದೆ. ಈ ಬಗ್ಗೆ ದಂಗಾದ ಸಂಸದೆ ಸುಮಲತ ಇದು ತುಂಬಾ ಅಪಾಯಕಾರಿ ಬೆಳವಣಿಗೆ, ಇದನ್ನು ಗಂಭೀರವಾಗಿ ಪರಿಗಣಿಸಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಲಿಂಗ ಪತ್ತೆಗೆ ಕಡಿವಾಣ ಹಾಕಬೇಕು. ಅಲ್ಲದೇ ಸ್ಪಷ್ಟ ಮಾಹಿತಿ ಜೊತೆಗೆ ಸಭೆಗೆ ಬನ್ನಿ ಎಂದು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಳಿಕ ಭ್ರೂಣ ಹತ್ಯೆಗೆ ಕೈಗೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು. ತಹಶೀಲ್ದಾರ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ. ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕಾನೂನು ಅರಿವು ಕಾರ್ಯಕ್ರಮಗಳನ್ನ ರೂಪಿಸಿದೆ, ಬಾಲ್ಯ ವಿವಾಹ ತಡೆಗಟ್ಟಲು ಸಹ ಕ್ರಮ ಕೈಗೊಳ್ಳಲಾಗಿದೆ ಎಂದರು.