5, 8, 9 ಮತ್ತು 11 ತರಗತಿ ಬೋರ್ಡ್ ಪರೀಕ್ಷೆ ರದ್ದು: ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠದ ಮೊರೆ ಹೋದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿರುವ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ದ್ವಿಸದಸ್ಯ ಪೀಠಕ್ಕೆ ಮೆಲ್ಮನವಿ ಸಲ್ಲಿಸಿದೆ.

ಇಂದು (ಮಾ.07) ಕಲಾಪ ಪ್ರಾರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಟಿ.ಜೆ.ಶಿವಶಂಕರೇಗೌಡ ಪೀಠದ ಎದುರು ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ್ ಅವರು ಈ ವಿಷಯ ಪ್ರಸ್ತಾಪಿಸಿದರು.

ಅಲ್ಲದೆ, ಮಾರ್ಚ್ 11ರಿಂದ ರಾಜ್ಯ ಪಠ್ಯಕ್ರಮವಿರುವ ಶಾಲೆಗಳಲ್ಲಿ 5 ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯು ಎಲ್ಲಾ ರೀತಿಯ ಸಿದ್ಧತೆ ನಡೆಸಿಕೊಂಡಿದೆ. ಪರೀಕ್ಷಾ ವೇಳಾಪಟ್ಟಿಯೂ ಸಿದ್ಧಗೊಂಡಿದೆ. ಈ ಹಂತದಲ್ಲಿ ಏಕಸದಸ್ಯ ಪೀಠ, ಶಿಕ್ಷಣ ಇಲಾಖೆ ಸುತ್ತೋಲೆ ರದ್ದುಪಡಿಸಿರುವ ಕಾರಣ ಪರೀಕ್ಷೆ ನಡೆಸಲು ಹಲವು ಸಮಸ್ಯೆ ಎದುರಾಗಲಿದೆ. ಆದ್ದರಿಂದ ತುರ್ತಾಗಿ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು. ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯನ್ಯಾಯಮೂರ್ತಿಗಳು, “ಈ ಪೀಠ ಇರುವುದಿಲ್ಲ. ಹೀಗಾಗಿ, ಮತ್ತೊಂದು ಪೀಠವನ್ನು ರಚನೆ ಮಾಡಿ ಇಂದೇ ವಿಚಾರಣೆಗೆ ವ್ಯವಸ್ಥೆ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

error: Content is protected !!