ಬೆಂಗಳೂರು: 5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ಹಾಗೂ 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಅರ್ಜಿ ಸಲ್ಲಿಸಿತ್ತು. ಬುಧವಾರ ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ, ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ತೀರ್ಪು ಪ್ರಕಟಿಸಿತ್ತು.ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8, 9 ಮತ್ತು 11 ತರಗತಿಯ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿರುವ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ದ್ವಿಸದಸ್ಯ ಪೀಠಕ್ಕೆ ಮೆಲ್ಮನವಿ ಸಲ್ಲಿಸಿತ್ತು. ಗುರುವಾರ ಕಲಾಪ ಪ್ರಾರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಟಿ.ಜೆ.ಶಿವಶಂಕರೇಗೌಡ ಪೀಠದ ಎದುರು ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ್ ಅವರು ಈ ವಿಷಯ ಪ್ರಸ್ತಾಪಿಸಿದ್ದರು.