5,8 ಮತ್ತು 9ನೇ ತರಗತಿ ಬೋರ್ಡ್​ ಪರೀಕ್ಷೆ: ಸುಪ್ರೀಂ ಕೋರ್ಟ್​ ತಡೆ:.

 

 

 

 

ಬೆಂಗಳೂರು:  5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದ ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹೈಕೋರ್ಟ್​ನ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಖಾಸಗಿ ಅನುದಾನ ರಹಿತ ಶಾಲೆಗಳು ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದವು.

ಈಗಾಗಲೇ ಶಿಕ್ಷಣ ಇಲಾಖೆ, ಸೋಮವಾರ, ಮಂಗಳವಾರ ಎರಡು ವಿಷಯಗಳ ಪರೀಕ್ಷೆಗಳನ್ನು ನಡೆಸಿತ್ತು. ಇದೀಗ ಇನ್ನುಳಿದ ವಿಷಯಗಳಿಗೆ ಸುಪ್ರೀಂ ತಡೆಯಾಜ್ಞೆ ವಿಧಿಸಿದೆ. ಆದರೆ, 11ನೇ ತರಗತಿ ಪರೀಕ್ಷೆಗಳು ಈಗಾಗಲೇ ಪೂರ್ಣ ಗೊಂಡಿರುವುದರಿಂದ ಈ ಬಗ್ಗೆ ನ್ಯಾಯಪೀಠ ಯಾವುದೇ ಪ್ರತಿಕ್ರಿಯೆ ವ್ಯಕ್ತಪಡಿಸಿಲ್ಲ.

ಏನಿದು ಪ್ರಕರಣ?:

ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು.

ಇದನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ, ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯ ಪೀಠ ಕಳೆದ ಬುಧವಾರ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆ ರದ್ದುಪಡಿಸಿ ಆದೇಶಿಸಿತ್ತು.ಬಳಿಕ ಏಕ ಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರವು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಕಳೆದ ಗುರುವಾರ ಮೆಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ರಾಜೇಶ್​ ರೈ ಅವರಿದ್ದ ವಿಭಾಗೀಯ ಪೀಠ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಬೋರ್ಡ್ ಮಟ್ಟದ ಪರೀಕ್ಷೆಗಳಿಗೆ ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಖಾಸಗಿ ಅನುದಾನ ರಹಿತ ಶಾಲೆಗಳು ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದವು.

error: Content is protected !!