ವಿಧಾನ ಸೌಧ ಪಾಕ್ ಪರ ಘೋಷಣೆ:ಆರೋಪಿಗಳಿಗೆ ಷರತ್ತುಬದ್ಧ ಜಾಮೀನು:

 

 

ಬೆಂಗಳೂರು : ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣದ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಬಂಧಿತ ಆರೋಪಿಗಳಾದ ದೆಹಲಿಯ ಕಿಶನ್‌ ಗಂಜ್‌ನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ ಹಾಗೂ ಬೆಂಗಳೂರಿನ ಜಯಮಹಲ್ ನಿವಾಸಿ ಡಿ.ಎಸ್‌.ಮುನಾವರ್ ಅಹ್ಮದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 39 ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ವಿ. ವಿಜೇತ್ ಪುರಸ್ಕರಿಸಿದ್ದು, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ಆರೋಪಿಗಳು 1 ಲಕ್ಷ ರೂ. ಮೊತ್ತದ ಮುಚ್ಚಳಿಕೆ ನೀಡಬೇಕು, ಇಬ್ಬರು ವ್ಯಕ್ತಿಗಳು ಜಾಮೀನು ಒದಗಿಸಬೇಕು. ಆರೋಪಿಗಳು ಭಾರತ ಬಿಟ್ಟು ಹೋಗಬಾರದು, ವಿಚಾರಣಾ ನ್ಯಾಯಾಲಯದ ಕರೆಗಳಿಗೆ ಹಾಜರಾಗಬೇಕು ಮತ್ತು ಮುಂದೆ ಇಂತಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು‌ ನೀಡಲಾಗಿದೆ.ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು, ‘ಪೊಲೀಸರು ಪ್ರಕರಣ ದಾಖಲಿಸುವ ಮುನ್ನ ಪೂರ್ವಾನುಮತಿ ಪಡೆದಿಲ್ಲ. ಆರೋಪಿಗಳಿಗೆ ಸಿಆರ್‌ಪಿಸಿ ಕಲಂ 41ರ ಅನ್ವಯ ನೋಟಿಸ್‌ ನೀಡಿಲ್ಲ. ಹಾಗೂ ಆರೋಪಿಸಲಾದ ಘೋಷಣೆಯ ಮಾದರಿಯನ್ನು ಧ್ವನಿ ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹಾಗಾಗಿ, ಇದು ಮೇಲ್ನೋಟಕ್ಕೆ ಸಾಕ್ಷ್ಯವೇ ಇಲ್ಲದ ಪ್ರಕರಣ ಎಂಬುದು ಸಾಬೀತಾಗುತ್ತದೆ’ ಎಂಬ ಅಂಶಗಳನ್ನು ನ್ಯಾಯಾಲಯದ ಮುಂದಿಟ್ಟು ವಾದ ಮಂಡಿಸಿದ್ದರು.

error: Content is protected !!