15 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ಕೋರ್ಟ್ ಆದೇಶಿಸಿದೆ.

ಶಿಕಾರಿಪುರ ತಾಲೂಕಿನಲ್ಲಿ 15 ವರ್ಷದ ಅಪ್ರಾಪ್ತೆ ಮೇಲೆ 23 ವರ್ಷದ ಯುವಕ ಲೈಂಗಿಕ ದೌರ್ಜನ್ಯವೆಸಗಿದ್ದ. 2023ರಲ್ಲಿ ನಡೆದ ಪ್ರಕರಣ ಇದಾಗಿದ್ದು ಅಂದೇ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸಿ ಕೋರ್ಟ್ಗೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.

ಆರೋಪಿಯ ಮೇಲೆ ಆರೋಪ ದೃಢಪಟ್ಟ ಹಿನ್ನೆಲೆ ನ್ಯಾಯಾಧೀಶರಾದ ಲತಾ ಅವರು ಯುವಕನಿಗೆ 20 ವರ್ಷ ಕಠಿಣ ಸೆರೆವಾಸ ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದರೆ 4 ತಿಂಗಳು ಸಾದಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಬಾಲಕಿಗೆ ಪರಿಹಾರವಾಗಿ ದಂಡದ ಮೊತ್ತದಲ್ಲಿ 45 ಸಾವಿರ ರೂ. ಹಾಗೂ ಸರ್ಕಾರದ ವತಿಯಿಂದ 7 ಲಕ್ಷ ರೂ. ನೀಡುವಂತೆ ಆದೇಶಿಸಲಾಗಿದೆ. ಸರ್ಕಾರದ ಪರವಾಗಿ ಅಭಿಯೋಜಕ ಎಸ್.ಹರಿಪ್ರಸಾದ್ ವಾದ ಮಂಡಿಸಿದ್ದರು.

error: Content is protected !!