ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯಾದ್ಯಂತ ಮಳೆ ಹೆಚ್ಚಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಚದುರಿದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಜೊತೆಗೆ ಬೀರುಗಾಳಿ ಸಂಭವಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.