ಯು.ಪಿ : ಹತ್ರಾಸ್ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಭೋಲೆ ಬಾಬಾ ಎಂಬವರ ಧಾರ್ಮಿಕ ಪ್ರವಚನ(ಸತ್ಸಂಗ) ಕಾರ್ಯಕ್ರಮದಲ್ಲಿ ಕಾಲ್ತುಳಿತದಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗುತ್ತಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳು ಹಾಗೂ ನೆರೆಯ ರಾಜ್ಯಗಳಿಂದಲೂ ಭಕ್ತರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ ನೂರಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.
ಈ ಕುರಿತು ಅಲಿಘರ್ ವಲಯ ಐಜಿ ಶಲಭ್ ಮಾಥುರ್ ಪ್ರತಿಕ್ರಿಯಿಸಿ, “ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಇಟಾಹ್ ಮತ್ತು ಹತ್ರಾಸ್ ಪಕ್ಕದ ಜಿಲ್ಲೆಗಳಿಂದ ಹೆಚ್ಚಿನ ಜನರು ಸತ್ಸಂಗದಲ್ಲಿ ಪಾಲ್ಗೊಂಡಿದ್ದರು. ಈ ಪೈಕಿ ಹೆಚ್ಚಿನವರ ಗುರುತು ಪತ್ತೆ ಹಚ್ಚಲಾಗಿದ್ದು, ಉಳಿದವರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ” ಎಂದು ತಿಳಿಸಿದರು.
ಈ ಘಟನೆಯಲ್ಲಿ 7 ಮಕ್ಕಳು, ಒಬ್ಬ ಪುರುಷ ಇದ್ದು ಉಳಿದವರು ಎಲ್ಲರೂ ಮಹಿಳೆಯರು ಎಂದು ತಿಳಿದುಬಂದಿದೆ. ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು, ಕಾರ್ಯಕ್ರಮದ ಆಯೋಜಕರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಜರ್ಮನಿ, ಫ್ರಾನ್ಸ್ ಮತ್ತು ಚೀನಾ ಸೇರಿದಂತೆ ಹಲವು ದೇಶಗಳ ರಾಯಭಾರಿಗಳು ಸಂತಾಪ ಸೂಚಿಸಿದ್ದಾರೆ.