ದ.ಕ: ರಾಜ್ಯದ ಅನೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಡುವು ನೀಡದೆ ಮಳೆ ಸುರಿಯುತ್ತಿದೆ. ಬೆಳ್ತಂಗಡಿ ತಾಲೂಕಿನಲ್ಲೂ ಮಳೆಯಬ್ಬರ ಜೋರಾಗಿದೆ.
ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಚ್ಚರಿಕೆ ನೀಡಿದ್ದಾರೆ.
ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ. ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸಬೇಕು, ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆಯೂ ಸೂಚನೆ ನೀಡಿದ್ದಾರೆ.
ಸಾರ್ವಜನಿಕರು ನದಿಗಳ, ತೊರೆ, ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸಬೇಕು. ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸಬೇಕು. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.