ಮೈಸೂರು: ದಸರಾ ಹಬ್ಬದ ತಯಾರಿ ಜೋರಾಗಿ ನಡೆಯುತ್ತಿರುವ ಸಂದರ್ಭದಲ್ಲೇ ಟಿ.ನರಸೀಪುರ ತಾಲೂಕಿನ ಹೋಟೆಲ್‌ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದೆ.
ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್‌ವೊಂದರಲ್ಲಿ ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕ ವಸ್ತುಗಳು ಮತ್ತು ಒಂದು ನಾಡ ಬಾಂಬ್ ಆಕಾರದ ಸ್ಫೋಟಕಗಳು ಪತ್ತೆಯಾಗಿದ್ದು ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್‌ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ವಸ್ತುಗಳನ್ನು ನೋಡಿದ ಹೋಟೆಲ್ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೋಟೆಲ್ ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕಿದ್ದಾರೆ.
ಕಳೆದ ವರ್ಷ ಮೈಸೂರು ದಸರಾ ಮೇಲೆ ಉಗ್ರರ ಕರಿ ನೆರಳು ಬಿದ್ದಿತ್ತು ಎಂಬ ಮಾಹಿತಿ ಗುಪ್ತಚರ ಇಲಾಖೆಗೆ ರವಾನೆಯಾಗಿತ್ತು. ಈ ಬಾರಿಯೂ ಸ್ಟೋಟಕಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಸದ್ಯ ಕಲ್ಲು ಗಣಿಗಾರಿಕೆಗೆ ಮತ್ತು ಪ್ರಾಣಿಗಳ ಬೇಟೆಗೆ ಸ್ಫೋಟಕಗಳನ್ನು ಬಳಸಲು ತೆಗೆದುಕೊಂಡು ಹೋಗುತ್ತಿದ್ದರು ಎಂದು ಸಂಶಯ ವ್ಯಕ್ತವಾಗಿದೆ.