ಬೆಳ್ತಂಗಡಿ: ರಾಜ್ಯ ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರಕ್ಕೆ ಅ.21ರಂದು ನಡೆಯುವ ಉಪ ಚುನಾವಣೆಗೆಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಉಡುಪಿ ಜಿಲ್ಲಾ ಪಂಚಾಯತ್‌ನ ಮಾಜಿ ಅಧ್ಯಕ್ಷ ಹಾಗೂ ಸಹಕಾರಿ ಧುರೀಣ ಬೈಂದೂರಿನ ಎಸ್.ರಾಜು ಪೂಜಾರಿ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.
ಅ.3ರಂದು ಬೆಳಗ್ಗೆ ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪಕ್ಷದ ಮುಖಂಡರುಗಳು ಒಟ್ಟಾಗಿ ಸೇರಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.
ರಾಜು ಪೂಜಾರಿ ಬಿ.ಕಾಂ ಪದವೀಧರರು. 1966ರಲ್ಲಿ ಜನಿಸಿದ ಇವರು 1987ರಲ್ಲಿ ಎನ್‌ಎಸ್‌ಯುಐ ಮೂಲಕ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದರು. 1990ರಲ್ಲಿ ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ, 1995-96ರಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಪ್ರಭಾರ ಅಧ್ಯಕ್ಷರಾಗಿದ್ದ ಇವರು 1998ರಿಂದ ಜಿಲ್ಲಾ ಕಾಂಗ್ರೆಸ್ ಸದಸ್ಯ ಕಾರ್ಯದರ್ಶಿಯಾಗಿದ್ದು ಮರವಂತೆ ಗ್ರಾಮ ಪಂಚಾಯತ್ ಸದಸ್ಯರಾಗುವ ಮೂಲಕ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾದರು.
ಕುಂದಾಪುರ ತಾಲೂಕು ಪಂಚಾಯತ್ ಸದಸ್ಯರಾಗಿಯೂ ಒಂದು ಅವಧಿಗೆ ಅನುಭವ ಪಡೆದು ಬಳಿಕ ಎರಡು ಅವಧಿಗೆ ಉಡುಪಿ ಜಿಲ್ಲಾ ಪಂಚಾಯತ್‌ನ ಸದಸ್ಯರಾಗಿ ಆಯ್ಕೆಯಾಗಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಜಿಲ್ಲಾ ಪಂಚಾಯತ್‌ನಲ್ಲಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ, ಸಾಮಾಜಿಕ ನ್ಯಾಯ ಸಮಿತಿಗಳಲ್ಲೂ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.
ರಾಜಕಾರಣದೊಂದಿಗೆ ಸಹಕಾರಿ ಕ್ಷೇತ್ರದಲ್ಲೂ ಅವರು ತಮ್ಮ ಛಾಪು ಮೂಡಿಸಿದ್ದರು. ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ, ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ನಿ. ಬೈಂದೂರು ಇವುಗಳ ಅಧ್ಯಕ್ಷರಾಗಿ ಕುಂದಾಪುರ ತಾಲೂಕು ಸಹಕಾರಿ ಯೂನಿಯನ್, ಕುಂದಾಪುರ ತಾಲೂಕು ಆರೋಗ್ಯ ಸಹಕಾರಿ ಸಂಘ, ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಹಾಗೂ ದ.ಕ.ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಮಂಗಳೂರು ಇದರ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿಯೂ ಸಕ್ರಿಯರಾಗಿರುವ ಇವರು ಸದ್ಯ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿದ್ದಾರೆ.