ಸಾಂದರ್ಭಿಕ ಚಿತ್ರ
ಮಂಗಳೂರು: ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈ ಹಿನ್ನಲೆ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ, ಅಕ್ಟೋಬರ್ 16 ರಿಂದ 19ರವರೆಗೆ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ವಾಯುಭಾರ ಕುಸಿತವಾದ ಕಾರಣಕ್ಕೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.