ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್‌ಐಆರ್: ‘ಮುಸ್ಲಿಮರಿಗೆ ಮತದಾನದ ಹಕ್ಕು ರದ್ದುಪಡಿಸಿ’ ಹೇಳಿಕೆ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ‘ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು’ ಎಂಬ ಹೇಳಿಕೆ ನೀಡಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಎನ್‌ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ವಾಮೀಜಿಯ ಹೇಳಿಕೆಗಳು ಕೋಮು ಸೌಹಾರ್ದತೆಗೆ ಧಕ್ಕೆ ತರಬಹುದು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ನವೆಂಬರ್ 26 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ವತಿಯಿಂದ ವಕ್ಫ್ ಬೋರ್ಡ್ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ್ದ ಸ್ವಾಮೀಜಿ, ‘‘ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು. ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತದೆ. ಅಷ್ಟು ಪ್ರೀತಿ ಇದ್ದರೆ ನಿಮ್ಮ ಮನೆ, ಸೈಟ್ ಬರೆದುಕೊಡಿ’’ ಎಂದು ಹೇಳಿದ್ದರು. ಈ ಹೇಳಿಕೆ ವಿರುದ್ಧ ದೂರು ದಾಖಲಾದ ಹಿನ್ನಲೆ ಪ್ರಸ್ತುತ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮಗಳನ್ನು ಅನುಸರಿಸುವ ನಿರೀಕ್ಷೆಯಿದೆ.

ವಿವಾದಾತ್ಮಕ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಆ ಬಗ್ಗೆ ಸ್ಪಷ್ಟನೆ ನೀಡಿದ್ದ ಚಂದ್ರಶೇಖರನಾಥ ಸ್ವಾಮೀಜಿ, ‘‘ಬಾಯಿ ತಪ್ಪಿ ಆ ಹೇಳಿಕೆ ನೀಡಿದೆ. ಅದಕ್ಕೆ ವಿಷಾದಿಸುತ್ತೇನೆ. ಮುಸ್ಲಿಮರೂ ಭಾರತೀಯರೆ. ಆದರೆ, ರೈತರಿಗೆ ಒಳ್ಳೆಯದಾಗಬೇಕು ಅಷ್ಟೇ’’ ಎಂದು ಹೇಳಿದ್ದರು.

error: Content is protected !!