ಮೂರು ಹಸುಗಳ ಕೆಚ್ಚಲು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ..!: ಆರೋಪಿ ಸೈಯದ್ ನಸ್ರು ಪೊಲೀಸ್ ವಶ

ಮೂರು ಹಸುಗಳ ಕೆಚ್ಚಲು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕ ನಗರದಲ್ಲಿ ಸಂಭವಿಸಿದ್ದು ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕರ್ಣ ಎಂಬವರು ಕಳೆದ ಹಲವು ವರ್ಷಗಳಿಂದ ಹಸು ಸಾಕುತ್ತಿದ್ದಾರೆ. ಶನಿವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದು, ಈ ಬಗ್ಗೆ ಹಸುಗಳ ಮಾಲೀಕ ಕರ್ಣ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಭಾನುವಾರ ರಾತ್ರಿ ಸೈಯದ್ ನಸ್ರು (30) ಎಂಬಾತನನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.

ಆರೋಪಿಯು ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಸೈಯದ್ ನಸ್ರು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಸದ್ಯ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಆದರೆ, ಇನ್ನೂ ಎರಡು ವಾರ ಗಾಯ ಮಾಸಲು ಸಮಯಬೇಕಿದೆ.
ಘಟನೆಯ ಬಗ್ಗೆ ಮಾತನಾಡಿದ ಹಸುಗಳ ಮಾಲೀಕ ಕರ್ಣ ಅವರು, ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಕಬ್ಜಾ ಮಾಡಲು ಮುಂದಾಗಿದ್ದರು. ಈ ವೇಳೆ ನಾನು ಮತ್ತು ಸುತ್ತಮುತ್ತಲಿನ ಹಸುಗಳ ಮಾಲೀಕರು ಹಸುಗಳೊಂದಿಗೆ ಆಸ್ಪತ್ರೆ ಮುಂದೆ ಪ್ರತಿಭಟನೆ ಮಾಡಿದ್ವಿ. ಹೀಗಾಗಿ ಯಾರೋ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಹಿಂದೂ ಪರ ಸಂಘಟನೆ ಮುಖಂಡರು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಎಂಎಲ್‌ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಮಾಲೀಕ ಕರ್ಣನಿಗೆ ಸಾಂತ್ವನ ಹೇಳಿದ್ದರು.

 

error: Content is protected !!