ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿದ್ದ ಕಾರು ಅಪಘಾತಕ್ಕೀಡಾದ ಘಟನೆ ಇಂದು ಬೆಳಗಿನ ಜಾವ ಸುಮಾರು 6 ಗಂಟೆಗೆ ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಡೆದಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಗಿಸಿ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ಸಂದರ್ಭ ರಸ್ತೆಯಲ್ಲಿ ಅಡ್ಡಬಂದ ನಾಯಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ, ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಗೆ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.
ಘಟನೆಯ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಗನ್ ಮ್ಯಾನ್ ಜೊತೆಗಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದೆ. ಚೆನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ರವಿ ಪಾಟೀಲ ಪ್ರತಿಕ್ರಿಯಿಸಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕುತ್ತಿಗೆ, ಬೆನ್ನು, ಕೈ ಮತ್ತು ಕಾಲಿಗೆ ಗಾಯಗಳಾಗಿವೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ ಎಂಆರ್‌ಐ ಸ್ಕ್ಯಾನ್ ಮಾಡಲಾಗಿದೆ. ಎರಡು ದಿನಗಳಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್ ಆಗಲಿದ್ದಾರೆ. ಆದರೆ, ಒಂದು ತಿಂಗಳು ವಿಶ್ರಾಂತಿ ತೆಗೆದುಕೊಳ್ಳಬೇಕಾಗುತ್ತದೆ. ಇನ್ನು ಚನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ಸದ್ಯ ಇಬ್ಬರಿಗೂ ಚಿಕಿತ್ಸೆ ನೀಡುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಗನ್ ಮ್ಯಾನ್ ಮತ್ತು ಚಾಲಕನಿಗೂ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.