ಸಾಂದರ್ಭಿಕ ಚಿತ್ರ
ನವದೆಹಲಿ: ಎನ್‌ಸಿಆರ್‌ನಲ್ಲಿ ಇಂದು ಬೆಳಗ್ಗೆ 4.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಭೂಮಿಯ ಕಂಪನಕ್ಕೆ ಜನತೆ ಬೆಚ್ಚಿ ಬಿದ್ದಿದ್ದಾರೆ.
ಬೆಳಗ್ಗೆ 5.36 ಸುಮಾರಿಗೆ ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ.ಭೂಮಿಯ ಕಂಪನಕ್ಕೆ ಬೆದರಿದ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಸದ್ಯ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಈ ನಡುವೆ ಭೂಕಂಪನದ ಕೇಂದ್ರಬಿಂದು ದೌಲಾ ಕುವಾನ್‌ನಲ್ಲಿರುವ ದುರ್ಗಾಬಾಯಿ ದೇಶಮುಖ್ ಮಹಾವಿದ್ಯಾಲಯದ ಬಳಿ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 5 ಕಿಲೋಮೀಟರ್ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಪ್ರತಿಯೊಬ್ಬರೂ ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಮತ್ತು ಸಂಭವನೀಯ ಭೂಕಂಪಗಳ ಬಗ್ಗೆ ಎಚ್ಚರದಿಂದಿರುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.