ಶಾಲೆಗೆ ತೆರಳುತ್ತಿದ್ದ ವೇಳೆ ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ತೆಲಂಗಾಣದ, ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
ಹತ್ತನೇ ತರಗತಿಯ ವಿದ್ಯಾರ್ಥಿನಿ ನಿಧಿ(16) ಎಂದಿನಂತೆ ಬೆಳಗ್ಗೆ ಶಾಲೆಗೆ ಹೊರಟಿದ್ದಳು. ಬಳಿಕ ಶಾಲೆಯ ಬಳಿಯಲ್ಲೇ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾಳೆ. ತಕ್ಷಣ ಶಾಲೆಯ ಶಿಕ್ಷಕರು ವಿದ್ಯಾರ್ಥಿನಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ವಿದ್ಯಾರ್ಥಿನಿಯನ್ನು ಪರೀಕ್ಷೆ ನಡೆಸಿ, ಸಿಪಿಆರ್ ಸೇರಿದಂತೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಆದರೆ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬರದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮತ್ತೊಂದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಈ ವೇಳೆ ವಿದ್ಯಾರ್ಥಿನಿಯನ್ನು ಪರಿಶೀಲಿಸಿದ ವೈದ್ಯರು ಹೃದಯಾಘಾತದಿಂದ ನಿಧಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಮಗಳ ಸಾವಿನ ವಿಚಾರ ಹೆತ್ತವರಿಗೆ ತಿಳಿಯುತ್ತಿದ್ದಂತೆ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಇತ್ತ ಶಾಲೆಯಲ್ಲೂ ನಿಧಿ ಇನ್ನು ಇಲ್ಲ ಎಂಬ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಆಘಾತಕ್ಕೆ ಒಳಗಾಗಿದ್ದಾರೆ.