ವಾಹನ ತಪಾಸಣೆ ವೇಳೆ ಪೊಲೀಸರು ಕೈಗೊಳ್ಳಬೇಕಾದ ಕ್ರಮ: ಮಾರ್ಗಸೂಚಿ ಹೊರಡಿಸಿದ ಡಿಜಿಪಿ ಡಾ. ಎಂ.ಎನ್. ಸಲೀಂ:

 

 

ಬೆಂಗಳೂರು: ವಾಹನ ತಪಾಸಣೆ ವೇಳೆ ಮಂಡ್ಯದಲ್ಲಿ ಸಂಚಾರ ಪೊಲೀಸರ ಅಮಾನವೀಯ ವರ್ತನೆಯಿಂದ ಮಗು ಬಿದ್ದು ಸಾವನ್ನಪ್ಪಿರುವ ದುರಂತ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ವಾಹನ ತಪಾಸಣೆ ಮಾಡುವ ವೇಳೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮ ಮತ್ತು ಮಾರ್ಗಸೂಚಿ ಹೊರಡಿಸಿದೆ.

ವಾಹನ ತಪಾಸಣೆ ವೇಳೆ ಮಂಡ್ಯದಲ್ಲಿ ಮೂರು ವರ್ಷದ ಮಗು ಸಾವನ್ನಪ್ಪಿದ್ದು ಮುಂದೆ ಇಂತಹ ದುರ್ಘಟನೆ ನಡೆಯದಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎನ್. ಸಲೀಂ ಅವರು ತಪಾಸಣೆ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾರ್ಗಸೂಚಿ ಹೊರಡಿಸಿದ್ದಾರೆ.

ಮಾರ್ಗಸೂಚಿಗಳು:

ವಾಹನಗಳಿಗೆ ಸಂಬಂಧಪಟ್ಟ ದಾಖಲೆ ಪರೀಕ್ಷಿಸಲು ಸಕಾರಣವಿಲ್ಲದೇ ವಾಹನಗಳನ್ನು ತಡೆದು ತಪಾಸಣೆಗೊಳಪಡಿಸಬಾರದು. ಕಣ್ಣಿಗೆ ಕಾಣುವ (Visible violations) ಸಂಚಾರ ನಿಯಮ ಉಲ್ಲಂಘನೆಗಳು ಕಂಡುಬಂದಲ್ಲಿ ಮಾತ್ರವೇ ಅಂತಹ ವಾಹನಗಳನ್ನು ನಿಲ್ಲಿಸಿ ಪ್ರಕರಣಗಳನ್ನು ದಾಖಲಿಸಬೇಕು.

ಪ್ರಕರಣಗಳನ್ನು ದಾಖಲಿಸುವಾಗ ಈ ಕೆಳಕಂಡ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು.
ಹೆದ್ದಾರಿಗಳಲ್ಲಿ ಜಿಗ್ ಜಾಗ್ ಮಾದರಿಯಲ್ಲಿ ಬ್ಯಾರಿಕೇಡ್ ಹಾಕಿ ವಾಹನಗಳನ್ನು ತಡೆಯಬಾರದು.

ರಸ್ತೆಯಲ್ಲಿ ದಿಢೀರನೇ ಅಡ್ಡಬಂದು ವಾಹನ ನಿಲ್ಲಿಸುವಂತೆ ಹೇಳಬಾರದು.

ದ್ವಿಚಕ್ರ ವಾಹನ ಹಿಂಬದಿ ಸವಾರನನ್ನು ಹಿಡಿದು ಎಳೆಯುವುದು ಹಾಗೂ ವಾಹನಗಳ ಕೀಲಿಕೈ ತೆಗೆದುಕೊಳ್ಳುವುದನ್ನು ಮಾಡಬಾರದು.

ವೇಗವಾಗಿ ಚಲಾಯಿಸಿಕೊಂಡು ಬರುವ ವಾಹನ ಸವಾರರನ್ನು ಹಿಡಿಯಲು ಅವರನ್ನು ಬೆನ್ನಟ್ಟದೇ ಆ ವಾಹನಗಳ ನೋಂದಣಿ ಸಂಖ್ಯೆಯನ್ನು ಗುರುತು ಮಾಡಿಕೊಂಡು ಜಿಲ್ಲಾ ಪೊಲೀಸ್ ಠಾಣಾ ಸರಹದ್ದುಗಳ ಕಂಟ್ರೊಲ್ ರೂಂ ಗೆ ಮಾಹಿತಿ ನೀಡಿ, ವಾಹನ ಸವಾರರನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಬೇಕೆಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಸಂಚಾರ ನಿಯಮ ಉಲ್ಲಂಘನೆದಾರರ ವಿರುದ್ಧ ಭೌತಿಕವಾಗಿ ಪ್ರಕರಣ ದಾಖಲಿಸುವಾಗ ಅಥವಾ ವಾಹನಗಳ ತಪಾಸಣೆ ಮಾಡುವ ಸಂದರ್ಭದಲ್ಲಿ ಪೊಲೀಸರು ತಮ್ಮ ಸುರಕ್ಷತೆಗಾಗಿ Reflective Jacket ಗಳನ್ನು ಧರಿಸಬೇಕು.

ಸಂಜೆ ವೇಳೆಯಲ್ಲಿ ಕಡ್ಡಾಯವಾಗಿ ಎಲ್​​ಇಡಿ ಬಟನ್​​ಗಳನ್ನು ಉಪಯೋಗಿಸಬೇಕು ಹಾಗೂ ವಾಹನಗಳನ್ನು ತಪಾಸಣೆ ಮಾಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಬಾಡಿವೋರ್ನ್ ಕ್ಯಾಮರಾ ಧರಿಸಬೇಕು.

ಟ್ರಾಫಿಕ್ ಮ್ಯಾನೇಜ್ ಮೆಂಟ್ ಸೆಂಟರ್ (ಟಿಎಂಸಿ) ಅಥವಾ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್ ಮೆಂಟ್ ಸಿಸ್ಟಂ (ಐಟಿಎಂಎಸ್) ಹೊಂದಿರುವ ಘಟಕಗಳಲ್ಲಿ ಆದಷ್ಟು ಸಂಪರ್ಕ ರಹಿತ ಪ್ರಕರಣಗಳನ್ನು ದಾಖಲಿಸಬೇಕು.

ಅನಾಹುತಗಳನ್ನು ತಪ್ಪಿಸಲು ಎಲ್ಲಾ ಘಟಕಗಳಲ್ಲೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಾಲಕಾಲಕ್ಕೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂದು ಮಾರ್ಗಸೂಚಿಯಲ್ಲಿ ಸಲೀಂ ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಇತರೆ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಅತಿ ವೇಗವಾಗಿ ಚಲಿಸುವ ವಾಹನಗಳನ್ನು ತಡೆಯುವ ಪ್ರಯತ್ನ ಮಾಡಬಾರದು ಹಾಗೂ ಇಂತಹ ವಾಹನಗಳ ವಿರುದ್ಧ ಎಫ್.ಟಿ.ವಿ.ಆರ್ ದಾಖಲಿಸಲು ತಂತ್ರಜ್ಞಾನ ಅನುಸರಿಸಬೇಕು.

ವಾಹನಗಳ ವೇಗವನ್ನು ನಿಯಂತ್ರಿಸಲು ತಪಾಸಣೆಯ ಸ್ಥಳದ ಸುಮಾರು 100 ರಿಂದ 150 ಮೀಟರ್ ಮೊದಲೇ ರಿಫೆಕ್ಟಿವ್ ರಬ್ಬರ್ ಕೋನ್‌ಗಳನ್ನು ಹಾಗೂ ಸುರಕ್ಷತಾ ಸಲಕರಣೆಗಳನ್ನು ಅಳವಡಿಕೆ, ರಾತ್ರಿ ಮತ್ತು ತಡರಾತ್ರಿಯ ಸಂದರ್ಭದಲ್ಲಿ ಸಂಚಾರ ಸಿಗ್ನಲ್ ದೀಪಗಳಿರುವ ಅಥವಾ ಜಂಕ್ಷನ್ ಗಳ ಬದಿಯಲ್ಲೇ ವಾಹನಗಳನ್ನು ತಪಾಸಣೆ ಮಾಡಬೇಕೆಂದು ಆದೇಶದಲ್ಲಿ ನಮೂದಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಪೊಲೀಸರು ನಡೆಸುವ ನಾಕಾಬಂಧಿ ಪ್ರಕ್ರಿಯೆಗಳನ್ನು ಸಾಧ್ಯವಾದಷ್ಟು ಹೆದ್ದಾರಿಗಳಲ್ಲಿ ನಡೆಸಬಾರದು.
ತಪಾಸಣೆಯ ಸಂದರ್ಭದಲ್ಲಿ ಇಂತ ಕಾನೂನು ಸುವ್ಯವಸ್ಥೆ ಪೊಲೀಸರ ನೆರವು ಪಡೆಯಬೇಕು ಎಂದು ರಾಜ್ಯದ ಎಲ್ಲಾ ಜಿಲ್ಲಾ ಘಟಕಗಳ ಪೊಲೀಸರಿಗೆ ಡಿಜಿಪಿ ಸಲೀಂ ತಾಕೀತು ಮಾಡಿದ್ದಾರೆ.

error: Content is protected !!