ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಗೆ ಜೀವಾವಧಿ ಶಿಕ್ಷೆ ಪ್ರಕಟ:

 

 

 

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತಾದ ಹಿನ್ನೆಲೆ ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರಿಗೆ ಶನಿವಾರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಆರೋಪ ಸಂಬಂಧ ವಾದ -ಪ್ರತಿವಾದ ಸುದೀರ್ಘ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್​ ಗಜಾನನ ಭಟ್ ಅವರು ಈ ಆದೇಶ ನೀಡಿದ್ದಾರೆ.

ಜೀವಾವಧಿ ಶಿಕ್ಷೆ ಜೊತೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ. ಇದರಲ್ಲಿ ಸಂತ್ರಸ್ತೆಗೆ 7 ಲಕ್ಷ ರೂ.ಗಳ ಪರಿಹಾರವನ್ನು ನೀಡಲು ಸೂಚಿಸಿದೆ. ಇದಕ್ಕೂ ಮುನ್ನ ವೇಳೆ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ಎಸ್‌ಪಿಪಿ ಬಿ.ಎನ್. ಜಗದೀಶ, ಅಧಿಕಾರಯುತ ಸ್ಥಾನದಲ್ಲಿದ್ದ ಪ್ರಜ್ವಲ್ ರೇವಣ್ಣ ಸಂತ್ರಸ್ತ ಮಹಿಳೆಯನ್ನು ಬೆದರಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದರು. ಅವಿದ್ಯಾವಂತೆಯಾಗಿದ್ದ ಆಕೆಯ ಮೇಲೆ ಪದೇ ಪದೆ ಅತ್ಯಾಚಾರ ನಡೆದಿದೆ. ಅಪರಾಧಿಯಿಂದ ಸಂತ್ರಸ್ತೆ ಸುಲಭದ ಬಲಿಯಾಗಿದ್ದಳು. ಆಕೆಯ ಒಪ್ಪಿಗೆಯಿಲ್ಲದೇ ಅತ್ಯಾಚಾರದ ವಿಡಿಯೋ ಸಹ ಮಾಡಿಕೊಂಡಿದ್ದರು. ಬ್ಲಾಕ್‌ಮೇಲ್ ಮಾಡುವ ಉದ್ದೇಶದಿಂದಲೇ, ಅಪರಾಧಿ ಪ್ರಜ್ವಲ್ ರೇವಣ್ಣ ವಿಡಿಯೋ ಮಾಡಿಕೊಂಡಿದ್ದು, ಅವುಗಳನ್ನು ಅಸ್ತ್ರವಾಗಿ ಬಳಸಿಕೊಂಡಿದ್ದಾರೆ. ವಿಡಿಯೋ ಹೊರಬಂದ ನಂತರ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ್ದಳು. ವಿಡಿಯೋ ಬಹಿರಂಗವಾದ ಬಳಿಕ ಆಕೆ ಹಾಗೂ ಆಕೆಯ ಕುಟುಂಬದ ಮರ್ಯಾದೆಗೆ ಧಕ್ಕೆಯಾಗಿದೆ. ಪ್ರಕರಣದಲ್ಲಿ ಸಂತ್ರಸ್ತೆ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಹಿಂಸೆ ಅನುಭವಿಸಿದ್ದಳು ಎಂದು ನ್ಯಾಯಾಲಯಕ್ಕೆ ವಿವರಿಸಿದರು.

error: Content is protected !!