
ಬೆಳ್ತಂಗಡಿ:ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಇಂದು ರದ್ದುಪಡಿಸಿ ಆದೇಶಿಸಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಅವರು ಹೊರಡಿಸಿರುವ ಆದೇಶ ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜು ಅವರಿದ್ದ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿತು.
ಅಲ್ಲದೆ, ಅರ್ಜಿದಾರರ ವಿರುದ್ಧದ ಆರೋಪ ಸಂಬಂಧ ಮುಂದಿನ 15 ದಿನಗಳಲ್ಲಿ ಹೊಸದಾಗಿ ವಿಚಾರಣೆ ನಡೆಸಿ ಸೂಕ್ತ ಕಾರಣ ಮತ್ತು ಅಗತ್ಯ ಸೆಕ್ಷನ್ಗಳೊಂದಿಗೆ ಹೊಸ ಆದೇಶವನ್ನು ಹೊರಡಿಸಿದಬೇಕು ಎಂದು ಪುತ್ತೂರಿನ ಸಹಾಯಕ ಆಯುಕ್ತರಿಗೆ ನ್ಯಾಯಪೀಠ ನಿರ್ದೇಶನ ನೀಡಿತು.
ಅರ್ಜಿಯ ಸಂಬಂಧ ಈ ಹಿಂದೆ ನಡೆದ ವಿಚಾರಣೆ ವೇಳೆ, ಅರ್ಜಿದಾರರ ಪರ ವಕೀಲರು, ”ನಮ್ಮ ಕಕ್ಷಿದಾರರನ್ನು ಗಡಿಪಾರು ಮಾಡಿ ಹೊರಡಿಸಿರುವ ಆದೇಶ ಕಾನೂನುಬಾಹಿರ ಮತ್ತು ಏಕಪಕ್ಷೀಯ ಕ್ರಮವಾಗಿದೆ. ನನ್ನ ಅಹವಾಲು ಆಲಿಸದೆ ಏಕಾಏಕಿ ಆದೇಶ ಹೊರಡಿಸಲಾಗಿದೆ. ಆದ್ದರಿಂದ, ಗಡಿಪಾರು ಆದೇಶವನ್ನು ರದ್ದುಪಡಿಸಬೇಕು” ಎಂದು ಪೀಠಕ್ಕೆ ಮನವಿ ಮಾಡಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸರ್ಕಾರದ ಪರ ವಕೀಲರು, ”ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ವಿದ್ಯಾರ್ಥಿನಿಯ ಹೆಸರಿನಲ್ಲಿ ಚಳವಳಿ ಮಾಡುತ್ತಿದ್ದಾರೆ ಎಂಬುದು ಸಾರ್ವಜನಿಕರಿಗೆ ಗೊತ್ತಿದೆ. ಸರ್ಕಾರ ಸಹಜ ನ್ಯಾಯತತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿಲ್ಲ. ಅವರನ್ನು ಗಡಿಪಾರು ಆದೇಶ ಹೊರಡಿಸಿರುವುದಲ್ಲಿ ಯಾವುದೇ ಕಾನೂನು ಪ್ರಕ್ರಿಯೆಯ ಲೋಪವಾಗಿಲ್ಲ” ಎಂದು ಪೀಠಕ್ಕೆ ತಿಳಿಸಿದ್ದರು. ವಾದ–ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಪೀಠ, ಇಂದು ತೀರ್ಪು ಪ್ರಕಟಿಸಿದೆ.
ಪ್ರಕರಣದ ಹಿನ್ನೆಲೆ:
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ವಿವಿಧ ಠಾಣೆಗಳಲ್ಲಿ 32ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆದ್ದರಿಂದ ಅವರಿಂದ ಶಾಂತಿ ಭಂಗಕ್ಕೆ ಕಾರಣವಾಗುತ್ತಿದೆ. ಜಾತಿ, ಜಾತಿಗಳ ನಡುವೆ ಗೊಂದಲ ಸೃಷ್ಟಿಸಿದ್ದು, ಸಮಾಜದಲ್ಲಿ ಅಶಾಂತಿಯನ್ನುಂಟು ಮಾಡಿರುತ್ತಾರೆ. ಆದ ಕಾರಣ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂಬುದಾಗಿ ಬಂಟ್ವಾಳ ಉಪವಿಭಾಗದ ಪೊಲೀಸರು ಮನವಿ ಸಲ್ಲಿಸಿರುತ್ತಾರೆ. ಈ ಮನವಿಯನ್ನು ಪರಿಗಣಿಸಿದ್ದ ಪುತ್ತೂರಿನ ಸಹಾಯಕ ಆಯುಕ್ತರು ತಿಮರೋಡಿ ಮಹೇಶ್ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿ ಆದೇಶಿಸಿದ್ದರು. ಈ ಆದೇಶ ರದ್ದುಮಾಡಬೇಕು ಎಂದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.