
ಉಜಿರೆ: ಆಳ್ವಾಸ್ ನುಡಿಸಿರಿ-ವಿರಾಸತ್ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ರಥಬೀದಿಯಲ್ಲಿ ಕೀರ್ತಿಶೇಷ ಯು. ವಿಜಯರಾಘವ ಪಡ್ಡೆಟ್ನಾಯ ವೇದಿಕೆಯಲ್ಲಿ ಮಾರ್ಚ್ 22ರ ಭಾನುವಾರ ಸಂಜೆ 6.15ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಲಿದೆ ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಹೇಳಿದರು.
ಅವರು ಮಾ,20ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಕಾರ್ಯಕ್ರಮವನ್ನು ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ.ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಜಿರೆ ಜನಾರ್ದನ ದೇವಸ್ಥಾನದ ಶರತ್ ಕೃಷ್ಣ ಪಡುವೆಟ್ನಾಯ ,ಘಟಕದ ಗೌರವಾದ್ಯಕ್ಷ ಉಜಿರೆಯ ಕೆ. ಮೋಹನ್ ಕುಮಾರ್, ಗೌರವ ಸಲಹೆಗಾರ ಶಶಿಧರ ಶೆಟ್ಟಿ ಬರೋಡಾ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕೀರ್ತಿಶೇಷ ವಿಜಯರಾಘವ ಪಡ್ವೆಟ್ನಾಯ, ಪ್ರೊ. ಎಸ್. ಪ್ರಭಾಕರ್ ಹಾಗೂ ಕೀರ್ತಿಶೇಷ ಡಾ. ಬಿ. ಯಶೋವರ್ಮರವರಿಗೆ ಅರ್ಪಿಸಲಾಗಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರಿಂದ ಭಾರತೀಯ ಕಲಾಪ್ರಕಾರಗಳಾದ ಯೋಗ ದೀಪಿಕಾ, ಶಾಸ್ತ್ರೀಯ ನೃತ್ಯ-ಅಷ್ಟಲಕ್ಷ್ಮಿ, ಬಡಗುತಿಟ್ಟು ಯಕ್ಷಗಾನ ಶಂಕರಾರ್ಧ ಶರೀರಿಣಿ, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್ ಡ್ಯಾನ್ಸ್, ಮಲ್ಲಕಂಬ ಹಾಗೂ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ವರ್ಷಧಾರೆ, ಪುರುಲಿಯಾ ಸಿಂಹ ನೃತ್ಯ, ತೆಂಕುತಿಟ್ಟು ಯಕ್ಷಗಾನ ಹಿರಣಾಕ್ಷ ವಧೆ, ಬೊಂಬೆ ವಿನೋದಾವಳಿಯ ಪ್ರದರ್ಶನ ನೀಡಲಿದ್ದಾರೆ ಎಂದು ಹೇಳಿದರು.
ಪ್ರೇಕ್ಷಕರಿಗಾಗಿ 8000 ಕ್ಕೂ ಅಧಿಕ ಆಸನದ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರಲಿದೆ. ಸಾಂಸ್ಕೃತಿಕ ಕಾರ್ಯಕ್ರಮವು ಕ್ಲಪ್ತ ಸಮಯಕ್ಕೆ ಆರಂಭವಾಗಿ ನಿಗದಿತ ಸಮಯಕ್ಕೆ ಮುಕ್ತಾಯಗೊಳ್ಳಲಿದೆ. ಆಳ್ವಾಸ್ ಸಾಂಸ್ಕೃತಿಕ ವೈಭವವು ಕರ್ನಾಟಕದ ಅತ್ಯಂತ ಪ್ರಸಿದ್ಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಇದು ಕೇವಲ ಒಂದು ಕಾರ್ಯಕ್ರಮವಲ್ಲ, ನಮ್ಮ ದೇಶದ ಸಂಸ್ಕೃತಿ, ಪರಂಪರೆ ಮತ್ತು ವೈವಿಧ್ಯತೆಯ ಸೊಬಗನ್ನು ಒಂದೇ ವೇದಿಕೆಯಲ್ಲಿ ಕಣ್ಣುಂಬಿಸಿಕೊಳ್ಳಲು ಇರುವ ಸುಂದರ ಅವಕಾಶವಾಗಿದೆ ಎಂದು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರವೀಂದ್ರ ಶೆಟ್ಟಿ ಸುರಭಿ ಉಜಿರೆ, ವಸಂತ ಶೆಟ್ಟಿ ಶ್ರದ್ಧಾ, ವೆಂಕಟ್ರಮಣ ಶೆಟ್ಟಿ ಅಳ್ವಾಸ್ ಕಾಲೇಜಿನ ಉಪನ್ಯಾಸಕ ಅಂಬರೀಶ್ ಚಿಪ್ಳೂಣ್ಕರ್ ಉಪಸ್ಥಿತರಿದ್ದರು.