ಗಡೀಪಾರು ಆದೇಶ ಪ್ರಶ್ನಿಸಿ  ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್:

 

 

ಬೆಂಗಳೂರು: ಕಾನೂನು-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ತಮ್ಮನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 3ನೇ ಬಾರಿಗೆ ಗಡಿಪಾರು ಮಾಡಿ ಹೊರಡಿಸಲಾಗಿದ್ದ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಗುರುವಾರ ಹೈಕೋರ್ಟ್ ವಜಾಗೊಳಿಸಿತು.

ತಿಮರೋಡಿಯನ್ನು ಗಡಿಪಾರು ಮಾಡಿ 2026 ಮಾ.13ರಂದು ಪುತ್ತೂರು ವಿಭಾಗಾಧಿಕಾರಿ ಮೂರನೇ ಬಾರಿಗೆ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ತಿಮರೋಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಿದ್ದ ಏಕಸದಸ್ಯ ನ್ಯಾಯಪೀಠ, ಗಡಿಪಾರು ಆದೇಶ ಸಂಬಂಧ ಸರ್ಕಾರದ ಗೃಹ ಕಾರ್ಯದರ್ಶಿಗೆ ಮೇಲ್ಮನವಿ ಸಲ್ಲಿಸಬಹುದು ಎಂದು 2026ರ ಏಪ್ರಿಲ್ 30ರ ಆದೇಶದಲ್ಲಿ ಹೇಳಿತ್ತು. ಆದರೂ, ತಿಮರೋಡಿ ಹೈಕೋರ್ಟ್‌ಗೆ ನೇರವಾಗಿ ಮೇಲ್ಮನವಿ ಸಲ್ಲಿಸಿದ್ದರು.

ಈ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ, ಏಕಸದಸ್ಯ ನ್ಯಾಯಪೀಠದ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿ ಮೇಲ್ಮನವಿಯನ್ನು ವಜಾಗೊಳಿಸಿ ಆದೇಶಿಸಿತು.
ಇದೇ ವೇಳೆ, ಸರ್ಕಾರದ ಗೃಹ ಕಾರ್ಯದರ್ಶಿಗೆ ಮೇಲ್ಮನವಿ ಸಲ್ಲಿಸುವವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಏಕಸದಸ್ಯ ನ್ಯಾಯಪೀಠ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಆದರೆ, ವಿಭಾಗೀಯ ನ್ಯಾಯಪೀಠ ಅದನ್ನು ತಳ್ಳಿ ಹಾಕಿತು.

error: Content is protected !!