
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು ಕೇಳಿಬಂದ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಈ ಕುರಿತು ಪ್ರಕಾಶ್ ರಾಜ್ ಅವರು ಎಕ್ಸ್ ಮೂಲಕ ಪೋಸ್ಟ್ ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಕಾಶ್ ರಾಜ್, ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಗಾಳಿ ಸುದ್ದಿಗಳು ನಂಬಬೇಡಿ ಎಂದು ಬರೆದುಕೊಂಡಿದ್ದಾರೆ.

‘ಎಲ್ಲರಿಗೂ ನಮಸ್ಕಾರ.. ಮಾಧ್ಯಮಗಳಲ್ಲಿ, ಸಾಮಾಜಿಕ ಜಲತಾಣಗಳಲ್ಲಿ ಧರ್ಮಸ್ಥಳ ಪ್ರಕರಣದ ಕುರಿತಂತೆ ನನ್ನ ಬಗ್ಗೆ ಕೆಲವು ಸುದ್ದಿ ಚರ್ಚಿಸಲ್ಪಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಅತಿ ಸೂಕ್ಷ್ಮವಾದ ಮತ್ತು ಕೋಟ್ಯಾಂತರ ಭಕ್ತರ ನಂಬಿಕೆಗೆ ಧಕ್ಕೆ ತಂದಿರುವ ಪ್ರಕರಣವಾಗಿದೆ. ಆದ್ದರಿಂದ, ಈ ರೀತಿಯ ಅನುಮಾನಗಳಿಗೆ ಉತ್ತರಿಸಬೇಕಾಗಿರುವುದು ನನ್ನ ಕರ್ತವ್ಯವೂ ಆಗಿದೆ. ನಾನು ಸದ್ಯ ದೂರದೂರಿನಲ್ಲಿದ್ದೇನೆ. ಇನ್ನೆರಡು ದಿನಗಳಲ್ಲಿ ನಾನೇ ಸ್ವತಃ ಬಂದು ಮಾಧ್ಯಮ ಮಿತ್ರರ ಮೂಲಕ ಉತ್ತರಿಸುತ್ತೇನೆ. ಅಲ್ಲಿಯವರೆಗೆ ಗಾಳಿ ಮಾತುಗಳನ್ನು ಮತ್ತು ಕೆಲವು ದುರುಳರು ಈ ಸುದ್ದಿಗೆ ಕಟ್ಟಲೆತ್ನಿಸುತ್ತಿರುವ ರೆಕ್ಕೆ ಪುಕ್ಕಗಳನ್ನು ನಂಬದಿರಿ’ ಎಂದು ನಟ ಪ್ರಕಾಶ್ ರಾಜ್ ಬರೆದುಕೊಂಡಿದ್ದಾರೆ.
ಧರ್ಮಸ್ಥಳ ಪ್ರಕರಣ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದ ತನಿಖಾ ವರದಿ ಬಹಿರಂಗಪಡಿಸುವಂತೆ ಕೋರಿ ದೂರುದಾರ ಚಿನ್ನಯ್ಯ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಗುರುವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರ ಮತ್ತು ವಿಶೇಷ ತನಿಖಾ ದಳ(ಎಸ್ಐಟಿ)ಕ್ಕೆ ನೋಟಿಸ್ ಜಾರಿಗೊಳಿಸಿದೆ. ಚಿನ್ನಯ್ಯ ಸಲ್ಲಿಸಿದ್ದ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರು ಪ್ರಸ್ತಾಪವಾಗಿದೆ.