
ಬೆಳ್ತಂಗಡಿ ತಾಲೂಕಿನಾದ್ಯಂತ ಕಳೆದ 48 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಾರ್ವಜನಿಕರ ಜನಜೀವನ, ರಸ್ತೆ ಸಂಪರ್ಕ, ಸರ್ಕಾರಿ ಮೂಲಸೌಕರ್ಯ ಹಾಗೂ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 3ರಂದು ತುರ್ತು ಸಭೆ ನಡೆಯಲಿದೆ.
ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗರ ಸಭೆ ನಡೆಯಲಿದ್ದು, ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯ ಸಮಗ್ರ ಪರಿಶೀಲನೆ ನಡೆಸಿ, ಮುನ್ನೆಚ್ಚರಿಕೆ ಕ್ರಮಗಳು, ರಕ್ಷಣಾ ಕಾರ್ಯಾಚರಣೆ, ಪರಿಹಾರ ವ್ಯವಸ್ಥೆ ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯ ಕುರಿತು ಚರ್ಚಿಸಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು.
ಈ ಸಭೆಗೆ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳು, ಟಾಸ್ಕ್ ಫೋರ್ಸ್ ತಂಡಗಳ ಮುಖ್ಯಸ್ಥರು, ರೋವರ್ಸ್ ಮತ್ತು ರೇಂಜರ್ಸ್, ಎನ್‌ಸಿಸಿ, ಎನ್‌ಎಸ್‌ಎಸ್, ಶೌರ್ಯ ವಿಪತ್ತು ನಿರ್ವಹಣಾ ತಂಡ ಸೇರಿದಂತೆ ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲ ತಂಡಗಳ ಮುಖ್ಯಸ್ಥರು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ.
ಭಾರೀ ಮಳೆಯ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಸಮನ್ವಯ ಮತ್ತು ತ್ವರಿತ ಕ್ರಮಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ ಎಂದು ಶಾಸಕ ಹರೀಶ್ ಪೂಂಜ ಅವರ ಕಚೇರಿ ಶ್ರಮಿಕ ಪ್ರಕಟಣೆಯಲ್ಲಿ ತಿಳಿಸಿದೆ.