ಬಿಜೆಪಿ ಹಿರಿಯ ನಾಯಕ ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ:

 

 

 

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ (67) ಅವರು ಮಂಗಳವಾರ ಬೆಂಗಳೂರಿನಲ್ಲಿರುವ ತಮ್ಮ ಮಗಳ ಮನೆಯಲ್ಲಿ ನಿಧನರಾದರು. ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ನಾಗೇಶ್ ಅವರು ಎರಡು ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

1959ರಲ್ಲಿ ಜನಿಸಿದ ಬಿ.ಸಿ. ನಾಗೇಶ್ ಅವರು ತಿಪಟೂರು ವಿಧಾನಸಭಾ ಕ್ಷೇತ್ರದಿಂದ 2008 ಹಾಗೂ 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. 2021ರಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಸಚಿವರಾಗಿದ್ದ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ, ಶಾಲಾ ಸಮವಸ್ತ್ರ ನಿಯಮ ಹಾಗೂ ಶಿಕ್ಷಣದಲ್ಲಿ ಮೌಲ್ಯವರ್ಧನೆ ಸೇರಿದಂತೆ ಹಲವು ಪ್ರಮುಖ ವಿಚಾರಗಳಲ್ಲಿ ಕ್ರಮ ಕೈಗೊಂಡಿದ್ದರು.

ಆರ್‌ಎಸ್‌ಎಸ್‌ ಹಿನ್ನೆಲೆ: ಆರ್‌ಎಸ್‌ಎಸ್‌ನ ಕಟ್ಟಾಳುವಾಗಿದ್ದ ನಾಗೇಶ್ ಅವರು ತಮ್ಮ ರಾಜಕೀಯ ಜೀವನದಲ್ಲಿ ಶಿಸ್ತು ಮತ್ತು ಸರಳತೆಗೆ ಹೆಸರುವಾಸಿಯಾಗಿದ್ದರು. 1984ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದ್ದರು.

error: Content is protected !!