ಬರಾಯಕೆರೆ ಗಣಿಗಾರಿಕೆ ವಿರುದ್ಧ ಜಿಲ್ಲಾಧಿಕಾರಿಗೆ ದೂರು:

 

ಬೆಳ್ತಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಪ್ರದೇಶದಲ್ಲಿ ನಡೆಯುತ್ತಿರುವ ಕಪ್ಪುಕಲ್ಲಿನ ಗಣಿಗಾರಿಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರಿಗೆ ಮನವಿ ಸಲ್ಲಿಸಿದೆ.

ಬೆಳ್ತಂಗಡಿ ತಾಲೂಕು ಪಂಚಾಯತ್‌ನಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಸಮಿತಿ ಸದಸ್ಯರು, ಸ್ಥಳೀಯ ಭೂಮಾಲೀಕ ಶ್ರೀಕಾಂತ್ ಭಟ್ ಅವರು ಕೃಷಿ ಚಟುವಟಿಕೆಯ ನೆಪದಲ್ಲಿ ಕಳೆದ 25ಕ್ಕೂ ಹೆಚ್ಚು ವರ್ಷಗಳಿಂದ ನಿರಂತರವಾಗಿ ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ, ಕಾನೂನುಬಾಹಿರವಾಗಿ ಸ್ಫೋಟಕಗಳನ್ನು ಬಳಸುತ್ತಿರುವುದರಿಂದ ಶಾಲಾ ಮಕ್ಕಳು ಸೇರಿದಂತೆ ಸ್ಥಳೀಯರು ಆತಂಕ ಹಾಗೂ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಗಣಿಗಾರಿಕೆಯಿಂದ ಸ್ಥಳೀಯರ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕೃಷಿ ಚಟುವಟಿಕೆಗಳ ಮೇಲೂ ಕಲ್ಲು ಹಾಗೂ ಕಲ್ಲಿನ ಪುಡಿಯಿಂದ ದುಷ್ಪರಿಣಾಮ ಉಂಟಾಗಿದೆ ಎಂದು ಸಮಿತಿ ದೂರಿದೆ. ಬೃಹತ್ ಗಾತ್ರದ ಲಾರಿಗಳ ನಿರಂತರ ಸಂಚಾರದಿಂದ ಗ್ರಾಮ ಪಂಚಾಯತ್ ರಸ್ತೆಗಳು ಹಾಗೂ ಮೋರಿಗಳು ಹಾನಿಗೊಳಗಾಗಿವೆ. ಐತಿಹಾಸಿಕ ಬರಾಯಕೆರೆ ಕೂಡ ಕಲುಷಿತಗೊಂಡಿದ್ದು, ಅದರ ಸಂರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

ಕೃಷಿ ಚಟುವಟಿಕೆಯ ಹೆಸರಿನಲ್ಲಿ ಸಂಬಂಧಪಟ್ಟ ಇಲಾಖೆಗಳಿಗೆ ತಪ್ಪು ಮಾಹಿತಿ ನೀಡಿ ಹಲವು ವರ್ಷಗಳಿಂದ ಗಣಿಗಾರಿಕೆ ನಡೆಸುತ್ತಿದ್ದರೂ ಯಾವುದೇ ಇಲಾಖೆ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಸಮಿತಿ ಸದಸ್ಯರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಗಣಿಗಾರಿಕೆ ಕುರಿತು ಸಮಗ್ರ ತನಿಖೆ ನಡೆಸಿ, ಸಾರ್ವಜನಿಕರ ಸುರಕ್ಷತೆ ಹಾಗೂ ಐತಿಹಾಸಿಕ ಬರಾಯಕೆರೆ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಪ್ರಶಾಂತ್ ವೇಗಸ್, ಬರಾಯಕೆರೆ ಸಂರಕ್ಷಣಾ ಸಮಿತಿ ಮುಖಂಡರಾದ ಲಿಯೋ ಪಿರೇರಾ, ಹರೀಶ್ ಪೂಜಾರಿ, ಗಣೇಶ್ ದೇವಾಡಿಗ, ಮೇಲ್ವಿನ್ ಡಿಸೋಜ, ಪ್ರವೀಣ್ ನಿನ್ನಿಕಲ್ಲು, ಜೋನ್ ಡಿಸೋಜ, ದಿನೇಶ್ ಪೂಜಾರಿ, ಕೂಸ ಅಳದಂಗಡಿ ಹಾಗೂ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಉಪಸ್ಥಿತರಿದ್ದರು.

error: Content is protected !!