ಪತ್ರಕರ್ತನ ಮೇಲೆ ಹಲ್ಲೆ ಆರೋಪ: ಸರ್ಕಾರಿ ವೈದ್ಯ ಅಮಾನತು

 

 

 

ಉಡುಪಿ: ಪತ್ರಕರ್ತ  ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿದೆ.

ಆ.21ರಂದು ಶ್ರೀಕಾಂತ್ ಅವರು ತಮ್ಮ ಪತ್ನಿಯೊಂದಿಗೆ ಕುಂದಾಪುರದ ಹೋಟೆಲ್‌ವೊಂದರಲ್ಲಿ ಚಹಾ ಸೇವಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಏಕಾಏಕಿ ಆಕ್ರೋಶ ವ್ಯಕ್ತಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ‘ನನ್ನ ವಿರುದ್ಧವೇ ವರದಿ ಪ್ರಕಟಿಸುತ್ತೀಯಾ?’ ಎಂದು ಪ್ರಶ್ನಿಸಿ ಬೆದರಿಕೆ ಹಾಕಿದ ಬಳಿಕ ಪತ್ನಿಯ ಎದುರಲ್ಲೇ ಶ್ರೀಕಾಂತ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆಯ ದೃಶ್ಯಗಳು ಹೋಟೆಲ್‌ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಹೋಟೆಲ್ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಲು ಯತ್ನಿಸಿರುವುದು ಕಂಡುಬಂದಿದೆ. ಹಲ್ಲೆಗೊಳಗಾದ ಶ್ರೀಕಾಂತ್ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಶ್ರೀಕಾಂತ್ ನೀಡಿದ ದೂರಿನ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 71/2026 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಕಲಂ 126(2), 115(2), 352 ಮತ್ತು 351(2)ರಂತೆ ಪ್ರಕರಣ ದಾಖಲಿಸಲಾಗಿದೆ.

ಈ ಹಿಂದೆ ಕುಂದಾಪುರ ಸರ್ಕಾರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಕರು ಒಳರೋಗಿಗಳಿಂದ ಹಣ ಪಡೆಯುತ್ತಿದ್ದಾರೆ ಎಂಬ ಆರೋಪದ ಕುರಿತು ಶ್ರೀಕಾಂತ್ ಅವರು ಪತ್ರಿಕೆಯಲ್ಲಿ ವರದಿ ಪ್ರಕಟಿಸಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದ ದ್ವೇಷದಿಂದ ಹಲ್ಲೆ ನಡೆಸಲಾಗಿದೆ ಎಂದು ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.

ಸರ್ಕಾರಿ ಸೇವೆಯಿಂದ ಅಮಾನತು

ಘಟನೆಗೆ ಸಂಬಂಧಿಸಿದ ದೃಶ್ಯಗಳು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ವರದಿ ಸಲ್ಲಿಸಿದ್ದರು. ವರದಿಯನ್ನು ಆಧರಿಸಿ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರ ವರ್ತನೆಯು ಸರ್ಕಾರಿ ನೌಕರರಿಗೆ ತಕ್ಕುದಲ್ಲ ಎಂದು ಆರೋಗ್ಯ ಇಲಾಖೆ ಪರಿಗಣಿಸಿದೆ.

ಕರ್ತವ್ಯಲೋಪ ಹಾಗೂ ಬೇಜವಾಬ್ದಾರಿತನದ ಆರೋಪಗಳಿಗೆ ಸಂಬಂಧಿಸಿದ ಇಲಾಖಾ ವಿಚಾರಣೆ ಬಾಕಿ ಇರಿಸಿ, ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಪೊಲೀಸ್ ತನಿಖೆ ಮುಂದುವರಿದಿದ್ದು, ತನಿಖೆಯ ಬಳಿಕ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

error: Content is protected !!