ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆ ಖಂಡನೀಯ: ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

 

 

 

ಬೆಳ್ತಂಗಡಿ: ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿನ ಅಕ್ರಮ ಮತ್ತು ಭ್ರಷ್ಟಾಚಾರದ ಕುರಿತು ವರದಿ ಪ್ರಕಟಿಸಿದ್ದ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಾರ್ವಜನಿಕವಾಗಿ ಹಲ್ಲೆ ನಡೆಸಿರುವ ಆರೋಪವನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಸಮಿತಿಯ ಸಂಚಾಲಕ ಶೇಖರ್ ಎಲ್. ಲಾಯಿಲ ಅವರು ಹೇಳಿಕೆ ನೀಡಿದ್ದು, ಜನಸಾಮಾನ್ಯರ ಸಮಸ್ಯೆಗಳನ್ನು ಮತ್ತು ಸರ್ಕಾರಿ ವ್ಯವಸ್ಥೆಯಲ್ಲಿನ ಅಕ್ರಮಗಳನ್ನು ನಿರ್ಭೀತಿಯಿಂದ ವರದಿ ಮಾಡುವುದು ಪತ್ರಕರ್ತರ ಕರ್ತವ್ಯವಾಗಿದೆ. ಅಂತಹ ಕರ್ತವ್ಯ ನಿರ್ವಹಿಸುತ್ತಿರುವ ಪತ್ರಕರ್ತರ ಮೇಲೆ ಹಲ್ಲೆ ನಡೆಸುವುದು ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಯಾಗಿದೆ ಎಂದು ತಿಳಿಸಿದ್ದಾರೆ.

ಪತ್ರಕರ್ತರ ಮೇಲೆ ನಡೆಯುವ ದೈಹಿಕ ಹಲ್ಲೆಗಳು ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವುದಲ್ಲದೆ, ಸತ್ಯವನ್ನು ಹೊರತರುವ ಪತ್ರಕರ್ತರ ಕರ್ತವ್ಯ ನಿರ್ವಹಣೆಯ ಮೇಲೂ ಪರಿಣಾಮ ಬೀರುತ್ತವೆ. ಆದ್ದರಿಂದ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ಆರೋಪ ಸಾಬೀತಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಆರೋಪ ಎದುರಿಸುತ್ತಿರುವ ವೈದ್ಯರ ವಿರುದ್ಧ ಇಲಾಖಾ ಮಟ್ಟದಲ್ಲಿಯೂ ಸೂಕ್ತ ತನಿಖೆ ನಡೆಸಬೇಕು. ವೈದ್ಯಕೀಯ ವೃತ್ತಿಗೆ ಹಾಗೂ ಸರ್ಕಾರಿ ಸೇವೆಯ ಘನತೆಗೆ ಧಕ್ಕೆ ತರುವಂತಹ ಕೃತ್ಯಗಳು ನಡೆದಿದ್ದರೆ, ನಿಯಮಾನುಸಾರ ಕಠಿಣ ಶಿಸ್ತು ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪತ್ರಕರ್ತರು ಯಾವುದೇ ಭಯ ಅಥವಾ ಒತ್ತಡವಿಲ್ಲದೆ ತಮ್ಮ ವೃತ್ತಿಯನ್ನು ನಿರ್ವಹಿಸುವ ವಾತಾವರಣ ನಿರ್ಮಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಪತ್ರಕರ್ತರ ಮೇಲಿನ ಹಲ್ಲೆ, ದೌರ್ಜನ್ಯ ಮತ್ತು ಬೆದರಿಕೆಗಳನ್ನು ತಡೆಗಟ್ಟಲು ಪರಿಣಾಮಕಾರಿ ಕಾನೂನು ಮತ್ತು ರಕ್ಷಣಾ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಶೇಖರ್ ಎಲ್. ಲಾಯಿಲ ಆಗ್ರಹಿಸಿದ್ದಾರೆ.

 

error: Content is protected !!