
ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 156/2016ರಲ್ಲಿ ಕಳ್ಳತನ ಹಾಗೂ ಎಂಎಂಆರ್‌ಡಿ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಬೆಳ್ತಂಗಡಿ ನ್ಯಾಯಾಲಯದ ಸಿಸಿ ನಂ.298/2017 ಪ್ರಕರಣದಲ್ಲಿ ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಶಬೀರ್, ತಂದೆ ಇಬ್ರಾಹಿಂ, ಬಾಪುನಗರ ಮನೆ, ಹೆಸ್ಗಲ್ ಗ್ರಾಮ, ಮೂಡಿಗೆರೆ ತಾಲೂಕು, ಚಿಕ್ಕಮಗಳೂರು ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ನಗರದ ಎಪಿಎಂಸಿ ರಸ್ತೆಯಲ್ಲಿ ಆರೋಪಿಯನ್ನು ಪೊಲೀಸರು ಪತ್ತೆಹಚ್ಚಿ ದಸ್ತಗಿರಿ ಮಾಡಿದ್ದಾರೆ.
ಬೆಳ್ತಂಗಡಿ ಉಪವಿಭಾಗದ ಉಪಾಧೀಕ್ಷಕಿ ರೋಹಿಣಿ ಹಾಗೂ ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ಮಾರ್ಗದರ್ಶನದಲ್ಲಿ, ಪುಂಜಾಲಕಟ್ಟೆ ಠಾಣೆ ಪಿಎಸ್‌ಐ ರಾಜೇಶ್ ಕೆ.ವಿ. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಠಾಣೆಯ ಹೆಚ್‌ಸಿ ಗಳಾದ ರಾಜೇಶ್, ಪಿಸಿ , ಚೋಳಪ್ಪ ಸಂಶಿ ಹಾಗೂ ಪಿಸಿ ನಾಗರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.