
ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮವು ಲಾಯಿಲ ಸಂಗಮ ಸಭಾ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ , ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿ ನೆಲೆಸಿದ್ದ ಅಸಮಾನತೆ, ಜಾತಿ ತಾರತಮ್ಯ ಹಾಗೂ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಿ ಸಮಾನತೆ ಮತ್ತು ಮಾನವೀಯತೆಯ ಸಂದೇಶವನ್ನು ಸಾರಿದ ಮಹಾನ್ ಸಮಾಜ ಸುಧಾರಕರಾಗಿದ್ದಾರೆ.
“ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಮನುಷ್ಯನಿಗೆ” ಎಂಬ ನಾರಾಯಣ ಗುರುಗಳ ಸಂದೇಶವು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದೆ. ಶಿಕ್ಷಣ, ಸಂಘಟನೆ ಹಾಗೂ ಸಾಮಾಜಿಕ ಜಾಗೃತಿಯ ಮೂಲಕ ಸಮಾಜದ ಪ್ರಗತಿಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು, ಪರಸ್ಪರ ಸೌಹಾರ್ದತೆ, ಸಹಬಾಳ್ವೆ ಹಾಗೂ ಸಮಾನತೆಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ,ಸಂಪತ್. ಬಿ. ಸುವರ್ಣ, ತಹಶೀಲ್ದಾರ್ ಎನ್. ಎಸ್. ನರಗುಂದ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಪ.ಪಂ ಮುಖ್ಯಾಧಿಕಾರಿ ರಾಜೇಶ್, ಜಯಾನಂದ ಲಾಯಿಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.