
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಿಂದ ಹಾಸನ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಸುಬ್ರಹ್ಮಣ್ಯ–ಗುಂಡ್ಯ ರಾಜ್ಯ ಹೆದ್ದಾರಿಯ ಎರ್ಮಾಯಿಲ್‌ನಲ್ಲಿ ಶನಿವಾರ ರಾತ್ರಿ ನಡೆದಿದೆ.
ಬಿ.ಸಿ.ರೋಡ್ ಡಿಪೋಗೆ ಸೇರಿದ ಬಸ್ ಕುಕ್ಕೆ ಸುಬ್ರಹ್ಮಣ್ಯದಿಂದ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ಎರ್ಮಾಯಿಲ್ ಸಮೀಪ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಎಚ್ಚರಿಸಿದ್ದಾರೆ. ಬಳಿಕ 37 ಮಂದಿ ಪ್ರಯಾಣಿಕರನ್ನು ಯಾವುದೇ ಆತಂಕಕ್ಕೆ ಒಳಗಾಗದಂತೆ ಸುರಕ್ಷಿತವಾಗಿ ಬಸ್‌ನಿಂದ ಕೆಳಗಿಳಿಸಿದ್ದಾರೆ.
ಪ್ರಯಾಣಿಕರೆಲ್ಲರೂ ಬಸ್‌ನಿಂದ ಹೊರಬಂದ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರವಾಗಿ ವ್ಯಾಪಿಸಿದ್ದು, ನೋಡನೋಡುತ್ತಿದ್ದಂತೆ ಬಸ್‌ನ ಬಹುತೇಕ ಭಾಗ ಬೆಂಕಿಗಾಹುತಿಯಾಗಿದೆ. ಘಟನೆಯಿಂದ ಸುಬ್ರಹ್ಮಣ್ಯ–ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸುವ ಕಾರ್ಯ ನಡೆಸಿದರು. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇಂಜಿನ್ ಭಾಗದಲ್ಲಿನ ತಾಂತ್ರಿಕ ದೋಷವೇ ಕಾರಣವೇ ಅಥವಾ ಬೇರೆ ಯಾವುದೇ ಕಾರಣದಿಂದ ಬೆಂಕಿ ಹೊತ್ತಿಕೊಂಡಿತೇ ಎಂಬ ಬಗ್ಗೆ ಪರಿಶೀಲನೆ ನಡೆಯಬೇಕಿದೆ.
ಚಾಲಕನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಪ್ರಯಾಣಿಕರನ್ನು ಸಕಾಲದಲ್ಲಿ ಬಸ್‌ನಿಂದ ಇಳಿಸಲಾಗಿದ್ದು, ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.