
ಧರ್ಮಸ್ಥಳ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಸೋಮವಾರ ಧರ್ಮಸ್ಥಳ ಗ್ರಾಮದ ಅಶೋಕನಗರ ಪರಿಶಿಷ್ಟ ಜಾತಿ ಕಾಲೋನಿಗೆ ಭೇಟಿ ನೀಡಿ, ಅಲ್ಲಿನ ನಿವಾಸಿಗಳು ಹಾಗೂ ಸ್ವಚ್ಛತಾ ಕಾರ್ಮಿಕರ ಸಮಸ್ಯೆಗಳನ್ನು ಪರಿಶೀಲಿಸಿದರು.
ಧರ್ಮಸ್ಥಳ ದೇವಸ್ಥಾನ ಹಾಗೂ ವಸತಿಗೃಹಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ, ಹೊರಗುತ್ತಿಗೆ ಮತ್ತು ಖಾಯಂ ಸ್ವಚ್ಛತಾ ಕಾರ್ಮಿಕರ ಸಭೆ ನಡೆಸಿದ ಬಳಿಕ, ಹೆಚ್ಚಿನ ಸಂಖ್ಯೆಯಲ್ಲಿ ಸ್ವಚ್ಛತಾ ಕಾರ್ಮಿಕರು ವಾಸಿಸುವ ಅಶೋಕನಗರ ಕಾಲೋನಿಗೆ ಅವರು ಭೇಟಿ ನೀಡಿದರು.
ಕಾಲೋನಿ ನಿವಾಸಿಗಳಿಗೆ ಜಮೀನು ಮಂಜೂರು ಮಾಡಿಕೊಳ್ಳಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅನುಮತಿ ನೀಡಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ದಾಖಲೆಗಳನ್ನು ನೀಡುತ್ತಿಲ್ಲ ಎಂದು ಸ್ವಚ್ಛತಾ ಕಾರ್ಮಿಕರು ಅಧ್ಯಕ್ಷರ ಗಮನಕ್ಕೆ ತಂದರು.
ಈ ಕುರಿತು ಪ್ರತಿಕ್ರಿಯಿಸಿದ ಪಿ. ರಘು ಅವರು, ತಾಂತ್ರಿಕ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಿ ಒಂದು ತಿಂಗಳೊಳಗೆ ಜಮೀನಿನ ದಾಖಲೆಗಳನ್ನು ವಿತರಿಸುವಂತೆ ಹಾಗೂ ಈ ಬಗ್ಗೆ ವರದಿ ಸಲ್ಲಿಸುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದರು.
ನಿವೇಶನ ರಹಿತರ ಸಮಸ್ಯೆಗಳನ್ನು ಆಲಿಸಿದ ಅವರು, ಸರ್ಕಾರಿ ಜಮೀನು ಗುರುತಿಸಿ ಸುಸಜ್ಜಿತ ಬಡಾವಣೆ ನಿರ್ಮಿಸಿ ಅರ್ಹರಿಗೆ ನಿವೇಶನ ಹಂಚಿಕೆ ಮಾಡುವಂತೆ ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡಿದರು.
ಕಾಲೋನಿಯಲ್ಲಿರುವ ಹಳೆಯ ಮನೆಗಳ ದುರಸ್ತಿಗೆ ಅನುದಾನ ಒದಗಿಸುವುದರ ಜೊತೆಗೆ, ಅರ್ಹ ಫಲಾನುಭವಿಗಳಿಗೆ ಹೊಸ ಮನೆ ಮಂಜೂರು ಮಾಡುವ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರುವಂತೆ ಧರ್ಮಸ್ಥಳ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.
ಅಶೋಕನಗರ ಕಾಲೋನಿಯಲ್ಲಿ ಸುಸಜ್ಜಿತ ಚರಂಡಿ ವ್ಯವಸ್ಥೆ ಕಲ್ಪಿಸುವುದು ಹಾಗೂ ಅಗತ್ಯವಿರುವ ಕಡೆಗಳಲ್ಲಿ ತಡೆಗೋಡೆ ನಿರ್ಮಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪಿ. ರಘು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ಹಾಗೂ ಸಮುದಾಯ ಭವನ ನಿರ್ಮಿಸುವ ಅಗತ್ಯದ ಬಗ್ಗೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಹಾಗೂ ಯುವ ಕಾಂಗ್ರೆಸ್ ಉಪಾಧ್ಯಕ್ಷ ಯತೀಶ್ ಧರ್ಮಸ್ಥಳ ಅವರು ಆಯೋಗದ ಅಧ್ಯಕ್ಷರ ಗಮನ ಸೆಳೆದರು.
ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯ ಜಮೀನು ಕಾಯ್ದಿರಿಸಿ ಪ್ರಸ್ತಾವನೆ ಸಲ್ಲಿಸಿದಲ್ಲಿ, ಭವನ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ಪಿ. ರಘು ಅವರು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತಿಳಿಸಿದರು.
ಅಶೋಕನಗರ ಕಾಲೋನಿಯ ವಿವಿಧ ಮೂಲಭೂತ ಸೌಕರ್ಯ ಹಾಗೂ ನಿವೇಶನ ಸಮಸ್ಯೆಗಳನ್ನು ಯತೀಶ್ ಧರ್ಮಸ್ಥಳ ಅವರು ಆಯೋಗದ ಅಧ್ಯಕ್ಷರ ಗಮನಕ್ಕೆ ತಂದು, ಶೀಘ್ರ ಪರಿಹಾರಕ್ಕೆ ಮನವಿ ಮಾಡಿದರು.