ಬೆಳಗಾವಿ: ಗಣೇಶೋತ್ಸವದ ಸಂಭ್ರಮದ ನಡುವೆಯೇ ಭೀಕರ ಅಗ್ನಿ ಅವಘಡ – ಒಂದೇ ಕುಟುಂಬದ ನಾಲ್ವರ ಸಜೀವ ದಹನ:

 

 

 

ಬೆಳಗಾವಿ: ನಗರದ ಚವ್ಹಾಟಗಲ್ಲಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಮನೆಗೆ ಬೆಂಕಿ ಆವರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿಯ ತೀವ್ರತೆಯಿಂದ ಮನೆಯಲ್ಲಿದ್ದವರು ಹೊರಬರಲಾಗದೆ ಒಳಗೆ ಸಿಲುಕಿಕೊಂಡ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತರನ್ನು ಶಾರದಾ ದಮೋನೆ (45), ಭಾರತಿ ರಾಜಾರಾಮ ದಮೋನೆ (50), ಪ್ರಿಯಾ ಗಜಾನನ ದಮೋನೆ (28) ಹಾಗೂ ಗಂಗಾ ಗಜಾನನ ದಮೋನೆ (25) ಎಂದು ಗುರುತಿಸಲಾಗಿದೆ.

ಗಜಾನನ ದಮೋನೆ (65) ಹಾಗೂ ರೋಷನ್ ದಮೋನೆ (21) ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತ ಕುಟುಂಬ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು. ಗಣೇಶ ಚತುರ್ಥಿಯ ದಿನವೇ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವುದು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

“ನಿನ್ನೆ ಎಲ್ಲರೂ ಸಂಭ್ರಮದಿಂದ ಗಣೇಶನನ್ನು ಮನೆಗೆ ತಂದಿದ್ದರು. ಆದರೆ ಈಗ ನೋಡಿದರೆ ಇಡೀ ಕುಟುಂಬವೇ ನಾಶವಾಗಿದೆ,” ಎಂದು ಸಂಬಂಧಿಕರು ಕಣ್ಣೀರಿಟ್ಟಿದ್ದಾರೆ.

ಅಗ್ನಿ ಅವಘಡದಲ್ಲಿ ಮನೆಯು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!