
ಬೆಂಗಳೂರು: ಬಂಗಾಳ ಕೊಲ್ಲಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ಹಾಗೂ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆ 24ರವರೆಗೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲೂ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಸೆಪ್ಟೆಂಬರ್ 24ರವರೆಗೆ ಈ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಸಂದರ್ಭದಲ್ಲಿ ಗುಡುಗು-ಮಿಂಚಿನ ಜೊತೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಹಾಗೂ ಬಿರುಗಾಳಿಯ ಸಂದರ್ಭದಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.