ಸೌಜನ್ಯ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಅಸ್ತು

 

 

ಧರ್ಮಸ್ಥಳ ಗ್ರಾಮದ  ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದ್ದು, ವಿಶೇಷ ತನಿಖಾ ತಂಡ (SIT) ರಚಿಸಿ ಮೂರು ತಿಂಗಳೊಳಗೆ ತನಿಖಾ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದೆ.

2012ರ ಅಕ್ಟೋಬರ್ 9ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ  ಸೌಜನ್ಯ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿದ್ದರು. ಪ್ರಕರಣದ ತನಿಖೆಯನ್ನು ಆರಂಭದಲ್ಲಿ ಸ್ಥಳೀಯ ಪೊಲೀಸರು ನಡೆಸಿದ್ದು, ಬಳಿಕ ಸಿಐಡಿ ಹಾಗೂ ಸಿಬಿಐಗೆ ವಹಿಸಲಾಗಿತ್ತು. ಸಿಬಿಐ ತನಿಖೆಯ ಬಳಿಕ ಸಂತೋಷ್ ರಾವ್ ಅವರನ್ನು ಆರೋಪಿಯನ್ನಾಗಿ ಮಾಡಲಾಗಿತ್ತು.

ಆದರೆ, 2023ರ ಜೂನ್ 16ರಂದು ಸಿಬಿಐ ವಿಶೇಷ ನ್ಯಾಯಾಲಯವು ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿತ್ತು. ಖುಲಾಸೆಯ ಬಳಿಕ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆಹಚ್ಚಲು ಮರುತನಿಖೆ ನಡೆಸಬೇಕೆಂಬ ಆಗ್ರಹ ಮತ್ತೆ ಮುನ್ನೆಲೆಗೆ ಬಂದಿತ್ತು. ಸೌಜನ್ಯ ಕುಟುಂಬವೂ ಪ್ರಕರಣದ ಮರುತನಿಖೆಗೆ ಒತ್ತಾಯಿಸಿತ್ತು.

2024ರಲ್ಲಿ ಕರ್ನಾಟಕ ಹೈಕೋರ್ಟ್‌ನಲ್ಲಿ ಮರುತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆದಿತ್ತು. ಬಳಿಕ 2026ರಲ್ಲಿ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಮರುತನಿಖೆಯ ವಿಧಾನ ಹಾಗೂ ಯಾವ ತನಿಖಾ ಸಂಸ್ಥೆಯ ಮೂಲಕ ತನಿಖೆ ನಡೆಸಬೇಕು ಎಂಬ ವಿಚಾರದಲ್ಲಿ ವಾದ-ಪ್ರತಿವಾದಗಳು ನಡೆದಿದ್ದವು. ಅಗತ್ಯವಿದ್ದಲ್ಲಿ SIT ರಚಿಸಲು ಸಿದ್ಧವಿರುವುದಾಗಿ ರಾಜ್ಯ ಸರ್ಕಾರವೂ ನ್ಯಾಯಾಲಯಕ್ಕೆ ತಿಳಿಸಿತ್ತು.

ಇದೀಗ ಸುಪ್ರೀಂ ಕೋರ್ಟ್ SIT ಮೂಲಕ ಮರುತನಿಖೆಗೆ ಅವಕಾಶ ನೀಡಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿರುವುದು ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವಾಗಿದೆ. ಮರುತನಿಖೆಯ ವೇಳೆ ಯಾವ ಸಾಕ್ಷ್ಯಗಳು ಮತ್ತು ಅಂಶಗಳು ಬೆಳಕಿಗೆ ಬರುತ್ತವೆ ಹಾಗೂ ಪ್ರಕರಣದ ಮುಂದಿನ ತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

error: Content is protected !!