ಬೆಳ್ತಂಗಡಿಯಲ್ಲಿ ₹31.04 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಸೆ.29, 30ರಂದು ಶಿಲಾನ್ಯಾಸ–ಉದ್ಘಾಟನೆ

 

 

ಬೆಳ್ತಂಗಡಿ: ತಾಲೂಕಿನ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಹಾಗೂ ವಿವಿಧ ಯೋಜನೆಗಳಡಿ ಮಂಜೂರಾಗಿರುವ ಒಟ್ಟು ₹31.04 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮಗಳು ಸೆಪ್ಟೆಂಬರ್ 29 ಮತ್ತು 30ರಂದು ತಾಲೂಕಿನ ವಿವಿಧೆಡೆ ನಡೆಯಲಿವೆ.

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.

ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಹಾಗೂ 15ನೇ ಹಣಕಾಸು ಯೋಜನೆಯಡಿ (PM-ABHIM) ₹16.90 ಕೋಟಿ ವೆಚ್ಚದಲ್ಲಿ ಮಂಜೂರಾಗಿರುವ 26 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ನಿರ್ಮಾಣಕ್ಕೆ ಶಿಲಾನ್ಯಾಸ ನಡೆಯಲಿದೆ.

ಆದಿವಾಸಿ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ವಸತಿ ಸೌಲಭ್ಯ ಒದಗಿಸುವ ಉದ್ದೇಶದಿಂದ ₹9 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಎರಡು ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳ ಉದ್ಘಾಟನೆಯೂ ನಡೆಯಲಿದೆ.

ಇದರೊಂದಿಗೆ MRPL ಸಂಸ್ಥೆಯ CSR ಅನುದಾನದಡಿ ₹15 ಲಕ್ಷ ವೆಚ್ಚದಲ್ಲಿ ಚಾರ್ಮಾಡಿ ಅಂಗನವಾಡಿ ಕೇಂದ್ರದ ನಿರ್ಮಾಣಕ್ಕೆ ಶಿಲಾನ್ಯಾಸ, ₹12 ಲಕ್ಷ ವೆಚ್ಚದಲ್ಲಿ ಪೆರ್ಲಬೈಪಾಡಿ ಸರ್ಕಾರಿ ಪ್ರೌಢಶಾಲೆಯ ಶೌಚಾಲಯ ಕಾಮಗಾರಿಗೆ ಶಿಲಾನ್ಯಾಸ ಹಾಗೂ ₹12 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಬೆಳ್ತಂಗಡಿ ಸರ್ಕಾರಿ ಪ್ರೌಢಶಾಲೆಯ ಶೌಚಾಲಯ ಕಾಮಗಾರಿಯ ಉದ್ಘಾಟನೆ ನಡೆಯಲಿದೆ.

ವಿದ್ಯಾರ್ಥಿಗಳ ವಸತಿ ಸೌಲಭ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ₹2 ಕೋಟಿ ವೆಚ್ಚದ ನೂತನ ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ₹2 ಕೋಟಿ ವೆಚ್ಚದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಲಿದೆ.

ಗ್ರಾಮೀಣ ಪ್ರದೇಶಗಳ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ₹75 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಒಟ್ಟು ಮೂರು ಕಾಲುಸಂಕ ಕಾಮಗಾರಿಗಳಿಗೂ ಈ ಸಂದರ್ಭದಲ್ಲಿ ಶಿಲಾನ್ಯಾಸ ನಡೆಯಲಿದೆ.

ಆರೋಗ್ಯ, ಶಿಕ್ಷಣ, ವಿದ್ಯಾರ್ಥಿ ವಸತಿ ಹಾಗೂ ಗ್ರಾಮೀಣ ಮೂಲಸೌಕರ್ಯ ಕ್ಷೇತ್ರಗಳಿಗೆ ಒತ್ತು ನೀಡುವ ಮೂಲಕ ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ.

error: Content is protected !!