
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಾಯಿಲ–ಕೋಟಿಕಟ್ಟೆ ಸಡಕ್ ರಸ್ತೆಯ ದರ್ಪಿಂಜ ಸೇತುವೆ ಬಳಿ ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ಎಸೆದವರಿಗೆ ಗ್ರಾಮ ಪಂಚಾಯತ್ ವತಿಯಿಂದ ₹500 ದಂಡ ವಿಧಿಸಿ ಎಚ್ಚರಿಕೆ ನೀಡಿದ ಘಟನೆ ಸೆ. 23ರಂದು ನಡೆದಿದೆ.
ದರ್ಪಿಂಜ ಸೇತುವೆ ಸಮೀಪ ಕಾರಿನಲ್ಲಿ ಬಂದ ವ್ಯಕ್ತಿಗಳು ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ಹಾಗೂ ಇತರ ಕಸವನ್ನು ಎಸೆದು ತೆರಳಿರುವ ಬಗ್ಗೆ ಸ್ಥಳೀಯ ಸಾರ್ವಜನಿಕರು ಲಾಯಿಲ ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಿದ್ದರು. ಸಾರ್ವಜನಿಕರ ದೂರನ್ನು ಗಂಭೀರವಾಗಿ ಪರಿಗಣಿಸಿದ ಪಂಚಾಯತ್ ಅಧಿಕಾರಿಗಳು ತಕ್ಷಣ ಕಾರ್ಯಾಚರಣೆ ನಡೆಸಿದರು.
ಪಂಚಾಯತ್‌ನ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿ ಅವರು ಲಾಯಿಲ ಗ್ರಾಮದ ಬೀಟ್ ಪೊಲೀಸ್ ಬಿರಾದರ್ ಅವರ ಸಹಕಾರದೊಂದಿಗೆ ಕಸ ಎಸೆದವರನ್ನು ಪತ್ತೆಹಚ್ಚಿದರು. ಬಳಿಕ ಅವರಿಗೆ ₹500 ದಂಡ ವಿಧಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ಎಸೆಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಯಿತು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವುದರಿಂದ ಪರಿಸರ ಮಾಲಿನ್ಯ ಉಂಟಾಗುವುದಲ್ಲದೆ, ಸಾರ್ವಜನಿಕರ ಆರೋಗ್ಯ ಮತ್ತು ಸ್ವಚ್ಛತೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಮನೆ ಹಾಗೂ ವಾಹನಗಳಿಂದ ಉತ್ಪತ್ತಿಯಾಗುವ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ, ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಪಂಚಾಯತ್ ಸೂಚಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಮುಂದಿನ ದಿನಗಳಲ್ಲಿಯೂ ನಿಯಮಾನುಸಾರ ದಂಡಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರು ಕೂಡ ಇಂತಹ ಘಟನೆಗಳು ಕಂಡುಬಂದಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ಲಾಯಿಲ ಗ್ರಾಮ ಪಂಚಾಯತ್ ಕೈಗೊಂಡಿರುವ ಈ ಕ್ರಮವು ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಮಹತ್ವದ್ದಾಗಿದ್ದು, ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ.