
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಭೂರಹಿತ ಪರಿಶಿಷ್ಟ ಸಮುದಾಯದವರಿಗೆ ಡಿಸಿ ಮನ್ನಾ ಜಮೀನು ಮಂಜೂರು ಮಾಡಲು ಇರುವ ಕಾನೂನು ತೊಡಕುಗಳನ್ನು ನಿವಾರಿಸಿ, ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ.
ಡಿಸಿ ಮನ್ನಾ ಜಮೀನನ್ನು ಭೂರಹಿತ ಪರಿಶಿಷ್ಟರಿಗೆ ಮಂಜೂರು ಮಾಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಸಂಘಟನೆಗಳು ಕಳೆದ ಮೂರು ದಶಕಗಳಿಂದ ಹೋರಾಟ ನಡೆಸುತ್ತಿವೆ. ವಿವಿಧ ಸರ್ಕಾರಗಳು ಅಧಿಕಾರಕ್ಕೆ ಬಂದರೂ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಹಲವು ಹಂತಗಳಲ್ಲಿ ಹೋರಾಟ ನಡೆಸಲಾಗಿತ್ತು.
2023ರ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಡಿಸಿ ಮನ್ನಾ ಜಮೀನು ಮಂಜೂರು ಮಾಡುವುದಾಗಿ ಘೋಷಿಸಿತ್ತು. ಆದರೆ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸಮಿತಿಯ ಪದಾಧಿಕಾರಿಗಳು ಜಿಲ್ಲೆಯ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿ ಸರ್ಕಾರದ ಗಮನ ಸೆಳೆದಿದ್ದರು.
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲೇ ಡಿಸಿ ಮನ್ನಾ ಜಮೀನು ಮಂಜೂರಾತಿಗೆ ಆದೇಶ ಹೊರಡಿಸುವಂತೆ ಸಮಿತಿ ಸರ್ಕಾರವನ್ನು ಒತ್ತಾಯಿಸಿತ್ತು. ಆದರೆ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಸಂಘಟನೆಯ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ಪಕ್ಷದ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಪರಿಶಿಷ್ಟ ಸಮುದಾಯದ ಪ್ರಮುಖ ಬೇಡಿಕೆಯಾದ ಡಿಸಿ ಮನ್ನಾ ಭೂಮಿ ಮಂಜೂರಾತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಮುಖ್ಯಮಂತ್ರಿಗಳು ಈ ಬಗ್ಗೆ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.
ಇದರ ಹಿನ್ನೆಲೆಯಲ್ಲಿ ಅ. 1ರಂದು ಬೆಂಗಳೂರಿನ ವಿಧಾನಸೌಧದಲ್ಲಿರುವ ತಮ್ಮ ಕಚೇರಿಗೆ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಪದಾಧಿಕಾರಿಗಳನ್ನು ಆಹ್ವಾನಿಸಿದ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ ಡಿಸಿ ಮನ್ನಾ ಜಮೀನು ಮಂಜೂರಾತಿಗೆ ಸಂಬಂಧಿಸಿದ ಸಾಧಕ-ಬಾಧಕಗಳು, ಕಾನೂನು ತೊಡಕುಗಳು ಹಾಗೂ ವಿವಿಧ ದಾಖಲೆಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ಸಮಿತಿಯ ಪದಾಧಿಕಾರಿಗಳು ಸಲ್ಲಿಸಿದ ದಾಖಲೆಗಳನ್ನು ಸಚಿವರು ಪರಿಶೀಲಿಸಿ ಅಗತ್ಯ ಮಾಹಿತಿಯನ್ನು ಪಡೆದುಕೊಂಡರು.
ಡಿಸಿ ಮನ್ನಾ ಜಮೀನು ಮಂಜೂರಾತಿಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸುವ ನಿಟ್ಟಿನಲ್ಲಿ ವಿಶೇಷ ಕಾನೂನು ರೂಪಿಸುವ ಕುರಿತು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ, ಮುಂದಿನ ಸಚಿವ ಸಂಪುಟ ಸಭೆಗೆ ಮುಂಚಿತವಾಗಿ ಪ್ರಸ್ತಾವನೆ ಸಿದ್ಧಪಡಿಸುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಸಮುದಾಯದ ಡಿಸಿ ಮನ್ನಾ ಜಮೀನು ಮಂಜೂರಾತಿಗೆ ಸಂಬಂಧಿಸಿದಂತೆ ಸೂಕ್ತ ಕಾನೂನು ರೂಪಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು. ಅಲ್ಲದೆ, ದಲಿತ ಸಂಘಟನೆಗಳ ಬೇಡಿಕೆಯಂತೆ ಮಂಗಳೂರಿಗೆ ತಾವೇ ಆಗಮಿಸಿ ಭೂರಹಿತ ಪರಿಶಿಷ್ಟ ಸಮುದಾಯದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಪದಾಧಿಕಾರಿಗಳಾದ ಬಿ.ಕೆ. ವಸಂತ್ ಬೆಳ್ತಂಗಡಿ, ಪ್ರೇಮನಾಥ್ ಬಲ್ಲಾಳ್ ಬಾಗ್, ರಘು ಎಕ್ಕಾರ್, ಅಶೋಕ್ ಕೊಂಚಾಡಿ, ಕೃಷ್ಣಾನಂದ ಡಿ. ಮಂಗಳೂರು, ಜಗದೀಶ್ ಪಾಂಡೇಶ್ವರ್, ವೆಂಕಣ್ಣ ಕೊಯ್ಯೂರು, ಆನಂದ ಬೆಳ್ಳಾರೆ, ಹರಿಯಪ್ಪ ಮುತ್ತೂರು, ಶ್ರೀಧರ ಎಸ್. ಕಳೆಂಜ, ರಮೇಶ್ ಆರ್. ಬೆಳ್ತಂಗಡಿ, ನಾರಾಯಣ ಪುದುವೆಟ್ಟು, ಪ್ರಭಾಕರ್ ಶಾಂತಿಕೋಡಿ, ಸದಾಶಿವ ಪಡುಬಿದ್ರೆ, ಸರೋಜಿನಿ ಬಂಟ್ವಾಳ, ಯಶೋಧ ಡಿ. ಮಂಗಳೂರು, ರೋಹಿತ್ ಧರ್ಮಸ್ಥಳ ಹಾಗೂ ಪ್ರದೀಪ್ ಕುಮಾರ್ ಪುದುವೆಟ್ಟು ಉಪಸ್ಥಿತರಿದ್ದರು.