ಬೆಳ್ತಂಗಡಿ: ಮುಂದಿನ ಗ್ರಾ.ಪಂ. ಚುನಾವಣೆಯಲ್ಲಿ ತಾಲೂಕಿನ 46 ಗ್ರಾಮ ಪಂಚಾಯತ್ ಕ್ಷೇತ್ರಗಳಲ್ಲಿ 46ನ್ನೂ ಗೆಲ್ಲುವ ಮೂಲಕ ಕಾಂಗ್ರೆಸ್ ಮುಕ್ತ ಬೆಳ್ತಂಗಡಿ ಮಾಡಬೇಕು ಎಂದು ಶಾಸಕ ಹರೀಶ್ ಪೂಂಜ ತಿಳಿಸಿದರು.
ಅವರು ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಭಾರತೀಯ ಜನತಾ ಪಕ್ಷ ಹಮ್ಮಿಕೊಂಡಿದ್ದ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಕಾಂಗ್ರೆಸ್ಸಿನ ಪ್ರಮುಖ ಹುದ್ದೆಯಲ್ಲಿದ್ದ ತಾಲೂಕಿನ ಕೆಲವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇನ್ನೂ ಅನೇಕ ಕಾಂಗ್ರೆಸ್ ಸದಸ್ಯರು ಬಿಜೆಪಿ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ, ಪಕ್ಷಕ್ಕೆ ಸೇರಲು ಉತ್ಸುಕರಾಗಿದ್ದಾರೆ. ಇದರಿಂದ ಕಾಂಗ್ರೆಸ್ ನ ಅರ್ಧದಷ್ಟು ಮಂದಿ ಬಿ.ಜೆ.ಪಿ.ಗೆ ಸೇರುವ ಮೂಲಕ ಕಾಂಗ್ರೆಸ್ ಅವನತಿ ಆರಂಭವಾಗಿದೆ ಎಂದು ತಿಳಿಸಿದರು.
ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ತಾಲೂಕು ಪ್ರಭಾರಿ ಹರಿಕೃಷ್ಣ ಬಂಟ್ವಾಳ, ಬಿ.ಜೆ.ಪಿ. ಜಿಲ್ಲಾ ಪ್ರಭಾರಿ ಭರತೇಶ್, ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ್, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮೀ ಜನಾರ್ದನ, ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷ ಚೆನ್ನಕೇಶವ, ಮಂಡಲ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.