ಬೆಳ್ತಂಗಡಿ: ತೀವ್ರ ಕುತೂಹಲ ಮೂಡಿಸಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಜನಿ ಕುಡ್ವ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ನಾಮಪತ್ರ ಸಲ್ಲಿಸಲು ಶನಿವಾರ 10ರಿಂದ 11ಗಂಟೆ ವರೆಗೆ ಸಮಯ ಮೀಸಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ರಜನಿ ಕುಡ್ವ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜಯಾನಂದ ಗೌಡ ಅವರು
ಚುನಾವಣಾಧಿಕಾರಿ ಮಹೇಶ್ ಜೆ. ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.
ಅಧ್ಯಕ್ಷ ಸ್ಥಾನದ ಮೀಸಲಾತಿ ಅನ್ವಯ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಈ ಅನ್ವಯ ಒಬ್ಬರೇ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಬೆಂಬಲಿತ ಮಹಿಳಾ ಸದಸ್ಯರಾದ ರಜನಿ ಕುಡ್ವ, ತುಳಸಿ ಕರುಣಾಕರ್ ಇವರ ಹೆಸರು ಅಂತಿಮ ಪಟ್ಟಿಯಲ್ಲಿ ಕೇಳಿ ಬಂದಿತ್ತು. ಅಂತಿಮವಾಗಿ ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧ ಆಯ್ಕೆ ನಡೆಯುವುದು ಖಚಿತ ಎನ್ನಲಾಗುತ್ತಿದೆ.
ರಜನಿ ಕುಡ್ವ ಅವರು ಈಗಾಗಲೇ ಬಿಜೆಪಿಯಲ್ಲಿ ಹಲವಾರು ವರ್ಷಗಳಿಂದ ಗುರುತಿಸಿಕೊಂಡಿದ್ದು, ಮಂಡಲದ ಬಿಜೆಪಿ ಕಾರ್ಯದರ್ಶಿಯಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.
ಉಪಾಧ್ಯಕ್ಷ ಸ್ಥಾನಕ್ಕೆ ಜಯಾನಂದ ಗೌಡ ಅವರು ನಾಮಪತ್ರ ಸಲ್ಲಿಸಿದ್ದು, ಅವರೇ ಉಪಾಧ್ಯಕ್ಷರಾಗಲಿದ್ದಾರೆ ಎನ್ನಲಾಗುತ್ತಿದೆ. ಜಯಾನಂದ ಅವರು ಈಗಾಗಲೇ ಬಿ.ಜೆ.ಪಿ. ಹಾಗೂ ವಿವಿಧ ಸಂಘ ಸಂಸ್ಥೆಗಳು, ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರೆ.
ಬೆಳ್ತಂಗಡಿ ಪಟ್ಟಣ ಪಂಚಾಯತ್ ಈಗಾಗಲೇ ಒಟ್ಟು 11 ವಾರ್ಡ್ ಗಳನ್ನು ಹೊಂದಿದ್ದು, ಅದರಲ್ಲಿ 7 ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ 4 ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿರುತ್ತಾರೆ. 2018ರ ಅಕ್ಟೋಬರ್ 28ರಂದು ಚುನಾವಣೆ ನಡೆದಿದ್ದು, ಅ. 31ರಂದು ಚುನಾವಣಾ ಫಲಿತಾಂಶ ಪ್ರಕಟವಾಗಿತ್ತು. 2 ವರ್ಷ 7 ದಿನಗಳ ಬಳಿಕ ಪಟ್ಟಣ ಪಂಚಾಯತ್ ಆಡಳಿತ ಮಂಡಳಿ ಆಯ್ಕೆ ನಡೆಯುತ್ತಿದೆ. ಆದ್ದರಿಂದ ಚುನಾವಣೆ ಕುರಿತು ತೀವ್ರ ಕುತೂಹಲ ಮೂಡಿತ್ತು.
ಈಗಾಗಲೇ ನಾಮಪತ್ರ ಸಲ್ಲಿಕೆಯಾಗಿದ್ದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ನಾಮಪತ್ರ ಪರಿಶೀಲನೆ ನಡೆಯಲಿದೆ, ಮಧ್ಯಾಹ್ನ 1.25ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಬಳಿಕ ಚುನಾವಣಾಧಿಕಾರಿಗಳು ಅಧ್ಯಕ್ಷರು, ಉಪಾಧ್ಯಕ್ಷರ ಹೆಸರನ್ನು ಅಧಿಕೃತ ಘೋಷಣೆ ಮಾಡಲಿದ್ದಾರೆ.