ಬೆಳ್ತಂಗಡಿ: ತೀವ್ರ ಕುತೂಹಲ ಮೂಡಿಸಿದ್ದ ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಜನಿ ಕುಡ್ವ ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ, ತಹಶೀಲ್ದಾರ್ ಮಹೇಶ್ ಜೆ. ಅಧಿಕೃತ ಘೋಷಣೆ ಮಾಡಿದರು.
ಅಧ್ಯಕ್ಷೀಯ ಪಟ್ಟ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗೆ ಒಲಿದಿರುವುದರಿಂದ ತಾಲೂಕು ಬಿ.ಜೆ.ಪಿ.ಯಲ್ಲಿ ಸಂತಸ ಮನೆ ಮಾಡಿದೆ. ಇಲ್ಲಿಯವರೆಗೆ ಕಾಂಗ್ರೆಸ್ ಆಡಳಿತದಲ್ಲಿ ನಗರ ಪಂಚಾಯತ್ ಇದ್ದು, ಈ ಬಾರಿ ಬಿಜೆಪಿ ಅಧಿಕಾರ ಪಡೆಯಲು ಯಶಸ್ವಿಯಾಗಿದೆ.
ಅಧ್ಯಕ್ಷ ಸ್ಥಾನಕ್ಕೆ ರಜನಿ ಕುಡ್ವ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜಯಾನಂದ ಗೌಡ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ ಅವಿರೋಧ ಆಯ್ಕೆ ನಡೆದಿದೆ.
ವಿಜೇತರ ಹಿನ್ನೆಲೆ:
ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಅವರು ಕಳೆದ ಸುಮಾರು 20 ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ನಗರ ಪಂಚಾಯತ್‍ನಲ್ಲಿ ನಾಮನಿರ್ದೇಶಿತ ಸದಸ್ಯರಾಗಿದ್ದರು. ಪ್ರಸ್ತುತ ಬಿಜೆಪಿ ಮಂಡಲ ಕಾರ್ಯರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಪಾಧ್ಯಕ್ಷ ಜಯಾನಂದ ಗೌಡ ಅವರು ಈಗಾಗಲೆ ಸಂಘ ಪರಿವಾರದ ಕೆಲವು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದು, ಅದಲ್ಲದೆ ವಾಣಿ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾಗಿ, ತಾಲೂಕು ಒಕ್ಕಲಿಗ ಯಾನೆ ಗೌಡರ ಸೇವಾಸಂಘದ ನಿರ್ದೇಶಕರಾಗಿ ವಾಣಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅಧ್ಯಕ್ಷ ಸ್ಥಾನದ ಮೀಸಲಾತಿ ಅನ್ವಯ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಈ ಅನ್ವಯ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು.
ಉಪಾಧ್ಯಕ್ಷ ಸ್ಥಾನಕ್ಕೆ ಜಯಾನಂದ ಗೌಡ ಅವರು ನಾಮಪತ್ರ ಸಲ್ಲಿಸಿದ್ದರಿಂದ ಅವರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಳ್ತಂಗಡಿ ಪಟ್ಟಣ ಪಂಚಾಯತ್ ಈಗಾಗಲೇ ಒಟ್ಟು 11 ವಾರ್ಡ್ ಗಳನ್ನು ಹೊಂದಿದ್ದು, ಅದರಲ್ಲಿ 7 ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ 4 ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿರುತ್ತಾರೆ. ಆದ್ದರಿಂದ ಬಿಜೆಪಿ ಬಹುಮತ ಹೊಂದುವುದು ಖಚಿತವಾಗಿತ್ತು.