ಗುಣಮಟ್ಟದ ಶಿಕ್ಷಣದಿಂದ ಸರಕಾರಿ ಶಾಲೆಗಳ ಅಭಿವೃದ್ಧಿ: ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯಾಧ್ಯಕ್ಷ ಪ್ರಕಾಶ್‌ ಅಂಚನ್‌ ಅಭಿಮತ: ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಭೆ

ಬೆಳ್ತಂಗಡಿ: ಕೋವಿಡ್‌ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸರ್ಕಾರಿ ಶಾಲೆಗಳನ್ನು ಹಂತಹಂತವಾಗಿ ಒಂದನೇ ತರಗತಿಯಿಂದಲೇ ತೆರೆಯಲು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯಾಧ್ಯಕ್ಷ ಪ್ರಕಾಶ್‌ ಅಂಚನ್‌ ಒತ್ತಾಯಿಸಿದರು.
ಅವರು ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸುಸಜ್ಜಿತ ಕಟ್ಟಡ ನಿರ್ಮಿಸುವ ಕುರಿತು ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದರು.

ಎಲ್ಲಿ ನೋಡಿದರೂ ಬಸ್‌ಗಳಲ್ಲಿ ಜನದಟ್ಟಣೆ ಇದೆ. ಮಾರುಕಟ್ಟೆ, ಜಾತ್ರೆಗಳಲ್ಲಿ ಜನಜಾತ್ರೆಯಿದೆ. ಚಿತ್ರಮಂದಿರಗಳಲ್ಲಿ ಶೇ. 100ರಷ್ಟು ಸೀಟು ಭರ್ತಿಗೆ ಸರ್ಕಾರ ಅವಕಾಶ ನೀಡಿದೆ. ಹೀಗಿರುವಾಗ ಸರ್ಕಾರಿ ಶಾಲೆಗಳನ್ನೂ ತೆರೆಯುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಬೇಕು. ಸರ್ಕಾರಿ ಶಾಲೆಯಲ್ಲಿ ಕಲಿಯುವ ಬಡಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.

ಎರಡು ವರ್ಷಗಳ ಹಿಂದೆ 16 ಮಕ್ಕಳಿದ್ದ ಈ ಶಾಲೆಯಲ್ಲಿ ಇಂದು 120ಕ್ಕೂ ಅಧಿಕ ಮಕ್ಕಳು ದಾಖಲಾತಿ ಪಡೆದಿರುವುದು ನಿಜಕ್ಕೂ ದೊಡ್ಡ ಸಾಧನೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಿದರೆ ಮಕ್ಕಳ ಕೊರತೆಯನ್ನು ನೀಗಿಸಲು ಸಾಧ್ಯ ಎಂಬುದಕ್ಕೆ ಈ ಶಾಲೆ ಉತ್ತಮ ಉದಾಹರಣೆ. ಈ ಶಾಲೆಗೆ ಸುಸಜ್ಜಿತ ಕಟ್ಟಡ ಅಗತ್ಯವಿದ್ದು, ಇದಕ್ಕೆ ದಡ್ಡಲಕಾಡು ಶ್ರೀ ದುರ್ಗಾ ಚಾರಿಟಬಲ್‌ ಟ್ರಸ್ಟ್‌ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದರು.

ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸ್ಥಳೀಯ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್‌ ಅಧ್ಯಕ್ಷತೆ ವಹಿಸಿ, ‘ಕೂಕ್ರಬೆಟ್ಟು ಶಾಲೆಯನ್ನು ಮಾದರಿ ಶಾಲೆಯಾಗಿ ಬೆಳೆಸುವ ಗುರಿಯನ್ನು ಹೊಂದಲಾಗಿದೆ. ಈ ಶಾಲೆಗೆ ಸಾರ್ವಜನಿಕ ಸಹಭಾಗಿತ್ವದಲ್ಲಿ ಸುಮಾರು ₹ 1 ಕೋಟಿ ವೆಚ್ಚದಲ್ಲಿ 12 ಕೊಠಡಿಯ ಕಟ್ಟಡ ನಿರ್ಮಿಸುವ ಯೋಜನೆಯಿದೆ. ಈಗಾಗಲೇ ಶಾಸಕ ಹರೀಶ್‌ ಪೂಂಜ ಅವರು ₹ 42 ಲಕ್ಷ ಅನುದಾನವನ್ನು ಮಂಜೂರು ಮಾಡಿದ್ದಾರೆ. ಕಟ್ಟಡಕ್ಕೆ ಈಗಾಗಲೇ ನೆಲ ಸಮತಟ್ಟು ಮಾಡಲಾಗಿದ್ದು, ಮುಂದಿನ ತಿಂಗಳು ಶಿಲಾನ್ಯಾಸ ನೆರವೇರಿಸಲಾಗುವುದು. ಎಂಆರ್‌ಪಿಎಲ್‌ನ ಸಿಎಸ್‌ಆರ್‌ ನಿಧಿಯಿಂದ ಶಾಲಾ ಶೌಚಾಲಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಗ್ರಾಮೀಣ ಪ್ರದೇಶದಲ್ಲಿರುವ ಈ ಶಾಲೆಯನ್ನು ಹಂತಹಂತವಾಗಿ ಮೇಲ್ದರ್ಜೆಗೆ ಏರಿಸಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು.

ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಘಟಕದ ಕಾರ್ಯದರ್ಶಿ ಪುರುಷೋತ್ತಮ ಅಂಚನ್‌, ‘ಸಣ್ಣ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಅನುಕೂಲಕ್ಕಿಂತ ಅಪಾಯವೇ ಹೆಚ್ಚು. ಮಕ್ಕಳು ಮೊಬೈಲ್‌ ಗೀಳು ಬೆಳೆಸಿಕೊಂಡರೆ ಅದರಿಂದ ಹೊರತರುವುದು ಕಷ್ಟ. ಹೀಗಾಗಿ, ಬೌತಿಕ ತರಗತಿಗೆ ಸರ್ಕಾರ ಅವಕಾಶ ನೀಡುವುದು ಸೂಕ್ತ’ ಎಂದು ಅಭಿಪ್ರಾಯಪಟ್ಟರು.

ಗ್ರಾಮ ಪಂಚಾಯಿತಿ ಸದಸ್ಯರಾದ ರತ್ನಾಕರ ಬುಣ್ಣಾನ್‌, ಪದ್ಮಶ್ರೀ ಜೈನ್‌, ಅಶೋಕ್‌ ಪೂಜಾರಿ, ಶುಭರಾಜ ಹೆಗ್ಡೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಾಜುಪೂಜಾರಿ, ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸ್ಥಳೀಯ ಸಮಿತಿ ಕಾರ್ಯದರ್ಶಿ ನಾರಾಯಣ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಶ್‌ ಮರೋಡಿ ಇದ್ದರು. ಪ್ರಭಾರ ಮುಖ್ಯಶಿಕ್ಷಕಿ ಸುಫಲಾ ಸ್ವಾಗತಿಸಿದರು. ಸಹಶಿಕ್ಷಕಿ ಹರ್ಷಲಾ ವಂದಿಸಿದರು. ಎಸ್‌ಡಿಎಂಸಿ ಸದಸ್ಯರು, ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸ್ಥಳೀಯ ಸಮಿತಿ ಸದಸ್ಯರು, ಪೋಷಕರು, ಹಳೆವಿದ್ಯಾರ್ಥಿಗಳು ಇದ್ದರು.

ಚಿತ್ರ ಶೀರ್ಷಿಕೆ:

ಬೆಳ್ತಂಗಡಿ ತಾಲ್ಲೂಕಿನ ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯಾಧ್ಯಕ್ಷ ಪ್ರಕಾಶ್‌ ಅಂಚನ್‌ ಮಾತನಾಡಿದರು.

error: Content is protected !!